ಪಂಜಾಬ್‌ನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಪ್ರವಾಹ ಸ್ಥಿತಿ ಉಂಟಾಗಿದೆ
–ಪಿಟಿಐ ಚಿತ್ರ
ಚಂಡೀಗಢ: ಪಂಜಾಬ್‌ನಲ್ಲಿ ಭೀಕರ ಪ್ರವಾಹದಿಂದಾಗಿ ಮೃತಪಟ್ಟವರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. ಜತೆಗೆ, ರಾಜ್ಯದಾದ್ಯಂತ 1.84 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ನಡೆದ ಪಂಜಾಬ್ ಸಚಿವ ಸಂಪುಟ ಸಭೆಯಲ್ಲಿ ಪ್ರತಿ ಎಕರೆಗೆ ತಲಾ ₹20 ಸಾವಿರ ಪರಿಹಾರ ನೀಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ಜತೆಗೆ, ಪ್ರವಾಹದ ಬಳಿಕ ರೈತರು ತಮ್ಮ ಹೊಲಗಳಲ್ಲಿ ಸಂಗ್ರಹವಾಗಿರುವ ಮರಳನ್ನು ಹೊರತೆಗೆದು ಮಾರಾಟ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಏತನ್ಮಧ್ಯೆ, ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತುಸು ತಗ್ಗಿದ್ದು, ಪರಿಹಾರ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಯಾಸ್ ನದಿಯ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಬಿಯಾಸ್ ನದಿಯ ಒಳಹರಿವು ಭಾನುವಾರ 36,968 ಕ್ಯೂಸೆಕ್‌ನಿಂದ 34,580 ಕ್ಯೂಸೆಕ್‌ಗೆ ಇಳಿದಿದೆ. ಜತೆಗೆ, ಹೊರಹರಿವು ಭಾನುವಾರ ಸಂಜೆ 90,000 ಕ್ಯೂಸೆಕ್‌ನಿಂದ 76,008 ಕ್ಯೂಸೆಕ್‌ಗೆ ಇಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾಕ್ರಾ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಸೋಮವಾರ 1,677.2 ಅಡಿಗಳಿಗೆ ದಾಖಲಾಗಿದ್ದು, ಭಾನುವಾರ 1,677.98 ಅಡಿಗಳಷ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ರಾಜ್ಯದ 15 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದ್ದು, 3.87 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ಪಂಜಾಬ್ ಕಂದಾಯ ಸಚಿವ ಹರ್ದೀಪ್ ಸಿಂಗ್ ಹೇಳಿದ್ದಾರೆ.
ಮಾನ್ಸಾ, ಮೋಗಾ ಮತ್ತು ಪಟಿಯಾಲ ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಮೂವರು ಮೃತಪಟ್ಟಿದ್ದಾರೆ. ಈ ಮೂಲಕ ಮಳೆ ಸಂಬಂಧಿತ ಅವಘಡಗಳಲ್ಲಿ ಮೃತಪಟ್ಟವರ ಸಂಖ್ಯೆ 51ಕ್ಕೆ ಏರಿದೆ. ಪಠಾಣ್‌ಕೋಟ್‌ನಲ್ಲಿ ಇನ್ನೂ ಮೂವರು ಕಾಣೆಯಾಗಿದ್ದಾರೆ ಎಂದು ಸಿಂಗ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.