ಬಂಧನ ( ಸಾಂಕೇತಿಕ ಚಿತ್ರ)
ಚಂಡೀಗಢ: ಮಾದಕ ವಸ್ತು ನಿಗ್ರಹ ಅಭಿಯಾನದ ಭಾಗವಾಗಿ ರಾಜ್ಯದ 543 ಸ್ಥಳಗಳಲ್ಲಿ ದಾಳಿ ನಡೆಸಿದ್ದು, 118 ಮಂದಿ ಮಾದಕವಸ್ತು ಕಳ್ಳಸಾಗಣೆದಾರರನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.
ಕಳೆದ 12 ದಿನಗಳಲ್ಲಿ ಒಟ್ಟು 658 ಮಾದಕ ವಸ್ತು ಕಳ್ಳಸಾಗಣೆದಾರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಬಂಧಿತರಿಂದ 994 ಗ್ರಾಂ ಹೆರಾಯಿನ್, 4,633 ಮಾದಕ ದ್ರವ್ಯ ಮಾತ್ರೆಗಳು ಅಥವಾ ಚುಚುಮದ್ದುಗಳು ಹಾಗೂ ₹1.47 ಲಕ್ಷ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪೊಲೀಸ್ ಮಹಾ ನಿರ್ದೇಶಕ (ಡಿಜಿಪಿ) ಗೌರವ್ ಯಾದವ್ ಅವರ ನಿರ್ದೇಶನದ ಮೇರೆಗೆ ಪಂಜಾಬ್‌ನ ಜಿಲ್ಲೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ವಿಶೇಷ ಡಿಜಿಪಿ ಅರ್ಪಿತ್ ಶುಕ್ಲಾ, ‘1,600ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡ 250ಕ್ಕೂ ಹೆಚ್ಚು ಪೊಲೀಸ್ ತಂಡಗಳು ದಿನವಿಡೀ ಕಾರ್ಯಾಚರಣೆ ನಡೆಸಿದವು. ಈ ವೇಳೆ ಸುಮಾರು 659 ಅನುಮಾನಾಸ್ಪದ ವ್ಯಕ್ತಿಗಳನ್ನು ಪರಿಶೀಲಿಸಲಾಯಿತು’ ಎಂದು ಅವರು ಹೇಳಿದ್ದಾರೆ.
ರಾಜ್ಯವನ್ನು ಮಾದಕ ವಸ್ತು ಮುಕ್ತಗೊಳಿಸಲು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಮೂರು ತಿಂಗಳ ಗಡುವು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.