ಪುರಿ(ಒಡಿಶಾ): ಪುರಿ ಜಗನ್ನಾಥ ದೇವಾಲಯದ ಸಮೀಪ ಸಂಭವಿಸಿದ ಕಾಲ್ತುಳಿತ ಪ್ರಕರಣವನ್ನು 'ದೊಡ್ಡ ದುರಂತ' ಎಂದು ಕರೆದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಒಡಿಶಾ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಒಡಿಶಾದ ಪುರಿಯ ಗುಂಡಿಚಾ ದೇವಸ್ಥಾನದ ಬಳಿ ಇಂದು (ಭಾನುವಾರ) ಬೆಳಗಿನ ಜಾವ 4 ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಮೃತಪಟ್ಟು, ಸುಮಾರು 50 ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಥಯಾತ್ರೆ ವೀಕ್ಷಿಸಲು ನೂರಾರು ಭಕ್ತರು ದೇವಾಲಯದ ಬಳಿ ಜಮಾಯಿಸಿದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.
ಪರಿಹಾರ ಕಾರ್ಯಗಳಿಗೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರ ನೀಡುವಂತೆ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, 'ಇಂತಹ ದೊಡ್ಡ ಕಾರ್ಯಕ್ರಮಗಳಿಗೆ ಭದ್ರತೆ ಮತ್ತು ಜನಸಂದಣಿ ನಿರ್ವಹಣಾ ಸಿದ್ಧತೆಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ಜನರ ಜೀವ ರಕ್ಷಿಸುವುದು ಅತ್ಯಂತ ಮುಖ್ಯ. ಈ ಜವಾಬ್ದಾರಿಯಲ್ಲಿ ಯಾವುದೇ ಲೋಪ ಸ್ವೀಕಾರಾರ್ಹವಲ್ಲ' ಎಂದು ಹೇಳಿದ್ದಾರೆ.
ದುಃಖಿತ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ ಎಂದೂ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.