ತೇಜಸ್ವಿ ಯಾದವ್, ಎಂ.ಕೆ. ಸ್ಟಾಲಿನ್, ರಾಹುಲ್ ಗಾಂಧಿ
(ಪಿಟಿಐ ಚಿತ್ರ)
ಮುಜಾಫರ್‌ಪುರ (ಬಿಹಾರ): 'ಗುಜರಾತ್ ಮಾದರಿ' ಎಂದರೆ ಪ್ರಗತಿಯಲ್ಲ, ಬದಲಾಗಿ 'ಮತ ಕಳ್ಳತನ' ಆಗಿದ್ದು, ಚುನಾವಣಾ ಆಯೋಗದ ಸಹಾಯದಿಂದ ಬಿಜೆಪಿ ಮತಗಳ ಕಳ್ಳತನ ಮಾಡುವ ಮೂಲಕ ಚುನಾವಣೆಗಳಲ್ಲಿ ಗೆಲುವು ಸಾಧಿಸಿದೆ' ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು (ಬುಧವಾರ) ಆರೋಪಿಸಿದ್ದಾರೆ.
ಬಿಹಾರದಲ್ಲಿ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಹಮ್ಮಿಕೊಂಡಿರುವ 'ಮತದಾರರ ಅಧಿಕಾರ ಯಾತ್ರೆ'ಯಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್, ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಪುರಾವೆಗಳನ್ನು ಬಿಡುಗಡೆಗೊಳಿಸುವುದಾಗಿ ತಿಳಿಸಿದ್ದಾರೆ.
'ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಮತಗಳ ಕಳ್ಳತನ ಹೇಗೆ ನಡೆಸಲಾಯಿತು ಎಂಬುದಕ್ಕೆ ಸಂಬಂಧಿಸಿದಂತೆ ನಾವು ಮತ್ತಷ್ಟು ಪುರಾವೆಗಳನ್ನು ಒದಗಿಸಲಿದ್ದೇವೆ' ಎಂದು ಅವರು ಹೇಳಿದ್ದಾರೆ.
'ಬಿಹಾರದಲ್ಲಿ 65 ಲಕ್ಷ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಏಕೆ ಅಳಿಸಿ ಹಾಕಲಾಯಿತು ಎಂಬುದಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಉತ್ತರಿಸಲೇಬೇಕು' ಎಂದು ರಾಹುಲ್ ಒತ್ತಾಯಿಸಿದ್ದಾರೆ.
'ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಶ್ರೀಮಂತರ ಹೆಸರುಗಳನ್ನು ಅಳಿಸಿ ಹಾಕುತ್ತಿಲ್ಲ. ಬದಲಾಗಿ ದಲಿತರು, ಒಬಿಸಿ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಹೆಸರುಗಳನ್ನು ಅಳಿಸಿ ಹಾಕಲಾಗುತ್ತಿದೆ. ಏಕೆಂದರೆ ಜನ ಸಾಮಾನ್ಯರ ಧ್ವನಿಯನ್ನು ಹತ್ತಿಕ್ಕಲು ಬಿಜೆಪಿ ಬಯಸುತ್ತಿದೆ' ಎಂದು ರಾಹುಲ್ ಆರೋಪಿಸಿದ್ದಾರೆ.
ರಾಹುಲ್ ಅವರ 'ಮತದಾರರ ಅಧಿಕಾರ ಯಾತ್ರೆ'ಯಲ್ಲಿ ಇಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.