ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬ್ರಿಟಿಷ್ ನಾಗರಿಕ ಎಂದು ಅಲಹಾಬಾದ್ ಹೈಕೋರ್ಟ್‌ನಲ್ಲಿ ಪ್ರತಿಪಾದಿಸಿದ್ದ ಕರ್ನಾಟಕದ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಅವರು ಮಂಗಳವಾರ ಜಾರಿ ನಿರ್ದೇಶನಾಲಯದ ಮುಂದೆ ಹೇಳಿಕೆ ದಾಖಲಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
‘ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಸೆಕ್ಷನ್ 37ರ ಅಡಿಯಲ್ಲಿ ದೆಹಲಿಯಲ್ಲಿರುವ ತನಿಖಾ ಸಂಸ್ಥೆ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು’ ವಿಘ್ನೇಶ್ ಮಾಧ್ಯಮಗಳಿಗೆ ತಿಳಿಸಿದರು.
ರಾಹುಲ್ ಗಾಂಧಿ ಅವರು ಬ್ರಿಟಿಷ್ ಪ್ರಜೆ ಎಂಬುದರ ಕುರಿತು ಹೊಂದಿರುವ ದಾಖಲೆ ಹಾಗೂ ಸಾಕ್ಷ್ಯಗಳನ್ನು ನೀಡುವಂತೆ ವಿಘ್ನೇಶ್ ಅವರಿಗೆ ಅಧಿಕಾರಿಗಳು ಸೂಚಿಸಿದರು. ಈ ಸಂಬಂಧ ಹಲವು ಪ್ರಶ್ನೆಗಳನ್ನು ಕೇಳಿ, ಫೆಮಾ ಕಾಯ್ದೆ ಅಡಿಯಲ್ಲಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ ಎಂದು ಗೊತ್ತಾಗಿದೆ.
‘ನನ್ನ ಬಳಿ ಬಲವಾದ ಸಾಕ್ಷ್ಯ, ಮಾಹಿತಿ, ದಾಖಲೆಗಳಿವೆ’ ಎಂದು ವಿಘ್ನೇಶ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ಕುರಿತು ಕಾಂಗ್ರೆಸ್ ಪಕ್ಷವು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ರಾಹುಲ್ ಗಾಂಧಿ ಅವರು ಬ್ರಿಟಿಷ್ ಪ್ರಜೆಯಾಗಿದ್ದು, ಅವರು ದೇಶದಲ್ಲಿ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರು ಎಂದು ಘೋಷಿಸುವಂತೆ ಕೋರಿ ವಿಘ್ನೇಶ್ ಅವರು ಅಲಹಾಬಾದ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.