ADVERTISEMENT

ಬಿಹಾರದಲ್ಲಿ ಸಿಡಿಲಿಗೆ ಒಂದೇ ದಿನ 83 ಮಂದಿ ಸಾವು: ಗಣ್ಯರ ಸಂತಾಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಜೂನ್ 2020, 3:08 IST
Last Updated 26 ಜೂನ್ 2020, 3:08 IST
ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ
ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ   

ಪಟ್ನಾ:ಬಿಹಾರದಲ್ಲಿ ಸಿಡಿಲಿನಿಂದಾಗಿ ಪ್ರಾಣ ಕಳೆದುಕೊಂಡ 83 ಜನರ ಕುಟುಂಬದವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕಳೆದ 24 ಗಂಟೆ ಸಮಯದಲ್ಲಿ ಗುಡುಗು ಸಹಿತ ಮಳೆ ಸುರಿದಿತ್ತು. ಈ ವೇಳೆ ವಿವಿಧೆಡೆ 83 ಜನರು ಮೃತಪಟ್ಟಿದ್ದಾರೆ ಎಂದು ಬಿಹಾರ ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಮುಖ್ಯಮಂತ್ರಿನಿತೀಶ್‌ ಕುಮಾರ್‌ ಅವರು,ಮೃತಪಟ್ಟವರ ಕುಟುಂಬಕ್ಕೆ ತಲಾ ₹4 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

ADVERTISEMENT

ದುಃಖದ ಸಂಗತಿ:ಕೋವಿಂದ್
‘ಭಾರೀ ಮಳೆ ಮತ್ತು ಮಿಂಚಿನಿಂದಾಗಿ ಉತ್ತರ ಪ್ರದೇಶ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ ಪ್ರಾಣಹಾನಿ ಸಂಭವಿಸಿರುವ ಸುದ್ದಿ ತಿಳಿದು ದುಃಖವಾಯಿತು. ಆಡಳಿತವು ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ನಿರ್ವಹಿಸುತ್ತಿದೆ. ಸಂತ್ರಸ್ತ ಕುಟುಂಬಗಳಿಗೆ ನನ್ನ ಸಂತಾಪ’ ಎಂದುರಾಮನಾಥ ಕೋವಿಂದ್ ಟ್ವೀಟ್ ಮಾಡಿದ್ದಾರೆ.

ದುರಂತಮಯ:ಮೋದಿ
‘ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಸಿಡಿಲು ಮತ್ತು ಮಳೆಗೆ ಹಲವು ಜೀವಗಳು ಬಲಿಯಾದ ದುರಂತಮಯ ಸುದ್ದಿ ತಿಳಿಯಿತು. ರಾಜ್ಯ ಸರ್ಕಾರಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಆಘಾತಗೊಂಡಿದ್ದೇನೆ:ರಾಹುಲ್
‘ಬಿಹಾರದಲ್ಲಿ ಸಿಡಿಲಿನಿಂದಾಗಿ83 ಜನ ಮೃತಪಟ್ಟಿರುವ ಸುದ್ದಿ ಕೇಳಿ ಆಘಾತಗೊಂಡಿದ್ದೇನೆ. ಮೃತಪಟ್ಟವರ ಕುಟುಂಬದವವರಿಗೆ ನಷ್ಟ ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ. ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸಂತ್ರಸ್ತರಿಗೆ ನೆರವಾಗುವಂತೆ ಕಾಂಗ್ರೆಸ್‌ ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.