ಹೈದರಾಬಾದ್: ತೆಲಂಗಾಣದಲ್ಲಿ ನಿರ್ಮಾಣ ಹಂತದಲ್ಲಿರುವ ಕಾಲುವೆಯ ಸುರಂಗದ ಮೇಲ್ಫಾವಣಿಯು ಕುಸಿದ ಪರಿಣಾಮ 8 ಮಂದಿ ಕಾರ್ಮಿಕರು ಸಿಲುಕಿಕೊಂಡಿರುವ ಘಟನೆ ಸಂಬಂಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಳವಳ ವ್ಯಕ್ತಪಡಿಸಿದ್ದಾರೆ.
ನಾಗರಕರ್ನೂಲ್ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ) ಸುರಂಗದ ಮೇಲ್ಫಾವಣಿಯು ಶನಿವಾರ ಕುಸಿದಿದ್ದು, 8 ಮಂದಿ ಕಾರ್ಮಿಕರು ಸುರಂಗದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ರಾಹುಲ್ ಗಾಂಧಿ, 'ಕಾರ್ಮಿಕರು ಸುರಂಗದಲ್ಲಿ ಸಿಲುಕಿಕೊಂಡಿರುವ ಘಟನೆಯು ನನಗೆ ಅತೀವ ನೋವುಂಟು ಮಾಡಿದೆ. ಕಾರ್ಮಿಕರು ಸುರಕ್ಷತೆಯಿಂದ ಇರುತ್ತಾರೆ ಎಂದು ಆಶಿಸುತ್ತೇನೆ. ರಕ್ಷಣಾ ತಂಡಗಳು ಸಿಲುಕಿಕೊಂಡಿರುವ ಕಾರ್ಮಿಕರನ್ನು ಹೊರತರುವ ಎಲ್ಲಾ ಪ್ರಯತ್ನದಲ್ಲಿ ರಾಜ್ಯ ಸರ್ಕಾರ ತೊಡಗಿದೆ. ಈ ಬಗ್ಗೆ ಮಾಹಿತಿ ಪಡೆಯಲಾಗಿದೆ' ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಕರೆ ಮಾಡಿ ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗೆ ಕೇಂದ್ರದಿಂದ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಸೇನೆಯು ರಕ್ಷಣಾ ಕಾರ್ಯದಲ್ಲಿ ತೊಡಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.