ADVERTISEMENT

ನ್ಯಾಷನಲ್ ಹೆರಾಲ್ಡ್ ಪ್ರಕರಣ: 3 ಗಂಟೆ ಕಾಲ ರಾಹುಲ್ ಗಾಂಧಿ ವಿಚಾರಣೆ ನಡೆಸಿದ ಇ.ಡಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಜೂನ್ 2022, 9:49 IST
Last Updated 13 ಜೂನ್ 2022, 9:49 IST
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜಾರಿ ನಿರ್ದೇಶನಾಲಯ ಕಚೇರಿಗೆ ವಿಚಾರಣೆಗೆ ಹಾಜರಾದರು – ಪಿಟಿಐ ಚಿತ್ರ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜಾರಿ ನಿರ್ದೇಶನಾಲಯ ಕಚೇರಿಗೆ ವಿಚಾರಣೆಗೆ ಹಾಜರಾದರು – ಪಿಟಿಐ ಚಿತ್ರ   

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋಮವಾರ ಸುಮಾರು 3 ತಾಸು ವಿಚಾರಣೆಗೆ ಒಳಪಡಿಸಿದರು.

ಊಟದ ವಿರಾಮದ ವೇಳೆ ಜಾರಿ ನಿರ್ದೇಶನಾಲಯ ಕಚೇರಿಯಿಂದ ತೆರಳಿರುವ ರಾಹುಲ್ ಗಾಂಧಿ, ಊಟದ ಬಳಿಕ ಮತ್ತೆ ವಿಚಾರಣೆಗೆ ಹಾಜರಾಗುತ್ತಿದ್ದಾರೆ. ವಿಚಾರಣೆ ಮುಂದುವರಿಯಲಿದೆ ಎಂದು ಮೂಲಗಳು ಹೇಳಿವೆ.

ಈ ಮಧ್ಯೆ, ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ದೆಹಲಿಯ ಜಾರಿ ನಿರ್ದೇಶನಾಲಯ ಕಚೇರಿ ಹೊರಗೆ ಪ್ರತಿಭಟನೆ ನಡೆಸಿದರು.

ADVERTISEMENT

ಸಾರ್ವಜನಿಕರ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ದನಿಯೆತ್ತುತ್ತಿರುವ ಕಾರಣ ರಾಹುಲ್ ಗಾಂಧಿ ಅವರು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗುವಂತೆ ಮಾಡಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.

ಕರ್ನಾಟಕ ಸೇರಿದಂತೆ ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಯತ್ತ ಹೊರಟ ಕಾಂಗ್ರೆಸ್ ಪ್ರತಿಭಟನಾ ರ‍್ಯಾಲಿಯನ್ನು ಅರ್ಧದಲ್ಲಿಯೇ ತಡೆದ ಪೊಲೀಸರು, ಪ್ರತಿಭಟನಕಾರರನ್ನು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.