ADVERTISEMENT

ಅಮಿತ್‌ ಶಾ ಶೀಘ್ರ ಚೇತರಿಕೆಗೆ ರಾಹುಲ್‌, ಮಮತಾ ಸೇರಿದಂತೆ ಇನ್ನಿತರ ನಾಯಕರ ಹಾರೈಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಆಗಸ್ಟ್ 2020, 16:15 IST
Last Updated 2 ಆಗಸ್ಟ್ 2020, 16:15 IST
ಕೇಂದ್ರ ಗೃಹ ಸಚಿವ ಅಮಿತ್‌ ಶಾ
ಕೇಂದ್ರ ಗೃಹ ಸಚಿವ ಅಮಿತ್‌ ಶಾ   

ನವದೆಹಲಿ: ಕೋವಿಡ್‌ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಶೀಘ್ರ ಗುಣಮುಖರಾಗಲಿ ಎಂದು ರಾಜಕೀಯ ನಾಯಕರು ಮತ್ತು ಬೆಂಬಲಿಗರು ಹಾರೈಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಕೊರೊನಾ ಸೋಂಕು ಇರುವುದು ಭಾನುವಾರ ದೃಢಪಟ್ಟಿದೆ.

ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ಕೊರೊನಾದ ಲಕ್ಷಣಗಳು ಕಾಣಿಸಿಕೊಂಡ ಬಳಿಕ ಪರೀಕ್ಷೆ ಮಾಡಿಸಿಕೊಂಡಿದ್ದೇನೆ. ವರದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ನನ್ನ ಆರೋಗ್ಯ ಚೆನ್ನಾಗಿದೆ. ಆದರೆ, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದ ನೀವೆಲ್ಲರೂ ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ’ ಎಂದು ಬರೆದುಕೊಂಡಿದ್ದಾರೆ.

ADVERTISEMENT

ಈ ಬಗ್ಗೆ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, 'ಅಮಿತ್ ಶಾ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ' ಎಂದು ಹಾರೈಸಿದ್ದಾರೆ.

'ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ ಅವರ ಶೀಘ್ರ ಚೇತರಿಕೆಗಾಗಿ ನಾನು ಪ್ರಾರ್ಥಿಸುತ್ತೇನೆ' ಎಂದು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‌ ಟ್ವೀಟ್‌ ಮಾಡಿದ್ದಾರೆ.

ಅಮಿತ್‌ ಶಾ ಅವರಿಗೆ ಕೋವಿಡ್‌ ದೃಢಪಟ್ಟಿರುವ ಸುದ್ದಿ ಕೇಳಿದೆ. ಅವರು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸುತ್ತೇನೆ. ನನ್ನ ಪ್ರಾರ್ಥನೆಗಳು ಅವರು ಮತ್ತು ಅವರ ಕುಟುಂಬದರೊಂದಿಗಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್‌ ಮಾಡಿದ್ದಾರೆ.

ಅಮಿತ್‌ ಶಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ವಿಚಾರ ತಿಳಿದ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಕೇಂದ್ರ ಗೃಹ ಸಚಿವರ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತಿರುವುದಾಗಿ ಹೇಳಿದ್ದಾರೆ.

ಅಮಿತ್‌ ಶಾ ಚೇತರಿಕೆಗೆ ಹಾರೈಸಿ ಟ್ವೀಟ್‌ ಮಾಡಿದ ಇನ್ನಿತರ ನಾಯಕರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.