ADVERTISEMENT

ಫೆ. 6ರಂದು ಕಾಂಗ್ರೆಸ್‌ನಿಂದ ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ: ವರದಿ

ಪಿಟಿಐ
Published 3 ಫೆಬ್ರುವರಿ 2022, 10:38 IST
Last Updated 3 ಫೆಬ್ರುವರಿ 2022, 10:38 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಫೆಬ್ರುವರಿ 6ರಂದು ಪಂಜಾಬ್‌ಗೆ ಭೇಟಿ ನೀಡಲಿದ್ದು, ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಹಾಗೂ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರಲ್ಲಿ ಯಾರು ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂಬುದು ಕುತೂಹಲವೆನಿಸಿದೆ.

ಈ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಈಗಾಗಲೇ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆಗೆ ಸಮಾಲೋಚನೆ ನಡೆಸಿದ್ದಾರೆ. ಪಕ್ಷವು ತನ್ನ 'ಶಕ್ತಿ ಆ್ಯಪ್' ಮೂಲಕ ನಾಯಕರು ಹಾಗೂ ಕಾರ್ಯಕರ್ತರಿಂದ ಪ್ರತಿಕ್ರಿಯೆಯನ್ನು ಪಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗಷ್ಟೇ ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಶೀಘ್ರದಲ್ಲೇ ಘೋಷಣೆ ಮಾಡಲಿದ್ದೇವೆ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದರು.

ಕಾಂಗ್ರೆಸ್‌ನಲ್ಲಿ ಭಿನ್ನಮತ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಬೇಕು ಎಂಬ ಬಲವಾದ ಬೇಡಿಕೆ ಮೂಡಿಬಂದಿವೆ. ಸಿಧು ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರೆ ಚನ್ನಿ ಮುನಿಸಿಕೊಳ್ಳುವ ಸಾಧ್ಯತೆಯಿದೆ. ಇನ್ನೊಂದೆಡೆ ಚನ್ನಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರೆ ಸಿಧು ಬೆಂಬಲಿಗರು ಬಂಡಾಯ ಏಳುವ ಸಾಧ್ಯತೆಯಿದೆ.

ಈ ನಡುವೆ ಉಭಯ ನಾಯಕರು ಆದಷ್ಟು ಬೇಗನೇ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಬೇಕು ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಅಭ್ಯರ್ಥಿ ಯಾರೇ ಆದರೂ ಒಬ್ಬರನ್ನೊಬ್ಬರು ಬೆಂಬಲಿಸುವ ಭರವಸೆ ನೀಡಿದ್ದಾರೆ ಎಂದು ಜಲಂಧರ್ ವರ್ಚುವಲ್ ರ‍್ಯಾಲಿ ವೇಳೆಯಲ್ಲಿ ರಾಹುಲ್ ತಿಳಿಸಿದ್ದರು.

ಹಿಂದುಳಿದ ಸಮುದಾಯದನಾಯಕರಾಗಿರುವ ಚನ್ನಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಮಾಡುವುದಕ್ಕೆ ಜಾಸ್ತಿ ಒಲವಿದೆ. ವಿಧಾನಸಭೆ ಚುನಾವಣೆಯ ಕಾವೇರಿದ ಪರಿಸ್ಥಿತಿಯಲ್ಲಿ ಈ ಎಲ್ಲ ಸವಾಲುಗಳನ್ನು ಕಾಂಗ್ರೆಸ್ ಹೇಗೆ ನಿಭಾಯಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.