ADVERTISEMENT

ನವಜೋತ್‌ ಸಿಂಗ್‌ ಸಿಧು ಜತೆ ಭೇಟಿ ನಿಗದಿಯಾಗಿಲ್ಲ: ರಾಹುಲ್ ಗಾಂಧಿ ಸ್ಪಷ್ಟನೆ

ಪಿಟಿಐ
Published 30 ಜೂನ್ 2021, 5:20 IST
Last Updated 30 ಜೂನ್ 2021, 5:20 IST
ರಾಹುಲ್ ಗಾಂಧಿ (ಪಿಟಿಐ ಚಿತ್ರ)
ರಾಹುಲ್ ಗಾಂಧಿ (ಪಿಟಿಐ ಚಿತ್ರ)   

ನವದೆಹಲಿ: ಪಂಜಾಬ್ ಶಾಸಕ ನವಜೋತ್‌ ಸಿಂಗ್‌ ಸಿಧು ಜತೆ ಭೇಟಿ ನಿಗದಿಯಾಗಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಸಿಧು ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಅವರು ಈ ಸ್ಪಷ್ಟನೆ ನೀಡಿದ್ದಾರೆ.

ರಾಹುಲ್ ಗಾಂಧಿಯವರನ್ನು ಸಿಧು ಭೇಟಿ ಮಾಡಲಿದ್ದಾರೆ ಎಂದು ಅವರ ಕಚೇರಿ ಮೂಲಗಳು ತಿಳಿಸಿದ್ದವು.

ಆದಾಗ್ಯೂ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಸಿಧು ಅವರು ಶೀಘ್ರದಲ್ಲೇ ಭೇಟಿಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ADVERTISEMENT

ಸಿಧು ಮತ್ತು ಕಾಂಗ್ರೆಸ್‌ನ ಎಲ್ಲ ನಾಯಕರ ಭಿನ್ನಾಭಿಪ್ರಾಯ ಸರಿಪಡಿಸಿ ಚುನಾವಣೆ ವೇಳೆಗೆ ಪಕ್ಷದಲ್ಲಿ ಒಗ್ಗಟ್ಟು ಮೂಡಿಸಲು ರಾಹುಲ್ ಮತ್ತು ಪ್ರಿಯಾಂಕಾ ಪ್ರಯತ್ನಿಸುತ್ತಿದ್ದಾರೆ. ಪಂಜಾಬ್‌ನ ನಾಯಕರ ಜತೆ ರಾಹುಲ್ ಗಾಂಧಿ ಅವರು ಕಳೆದ ಕೆಲವು ದಿನಗಳಿಂದ ಮಾತುಕತೆ ನಡೆಸುತ್ತಿದ್ದು, ಪಕ್ಷದ ಆಂತರಿಕ ಸಂಘರ್ಷವನ್ನು ಸರಿಪಡಿಸಲು ಯತ್ನಿಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.

ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೂ ಮುನ್ನ ಪಂಜಾಬ್‌ ಘಟಕದಲ್ಲಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಕಾಂಗ್ರೆಸ್ ನಾಯಕತ್ವ ಉದ್ದೇಶಿಸಿದೆ. ಈ ನಿಟ್ಟಿನಲ್ಲಿ ರಾಹುಲ್ ಗಾಂಧಿ ಅವರು ಈಗಾಗಲೇ ಅನೇಕ ಸಚಿವರು, ಶಾಸಕರು, ಸಂಸದರ ಜತೆ ಮಾತುಕತೆ ನಡೆಸಿದ್ದಾರೆ.

2019ರ ಲೋಕಸಭೆ ಚುನಾವಣೆಯ ಬಳಿಕ ಕಾಂಗ್ರೆಸ್‌ನ ಪಜಾಬ್ ಘಟಕದಲ್ಲಿನ ಭಿನ್ನಮತ ಹೆಚ್ಚಾಗಿತ್ತು. ಚುನಾವಣೆಯಲ್ಲಿ ಪಂಜಾಬ್‌ನ ನಗರ ಪ್ರದೇಶಗಳಲ್ಲಿ ಕಾಂಗ್ರೆಸ್‌ಗೆ ಸೋಲಾಗಿತ್ತು. ಇದಕ್ಕೆ ಸಿಧು ಅವರ ವೈಫಲ್ಯವೇ ಕಾರಣ ಎಂದು ಆರೋಪಿಸಿದ್ದ ಮುಖ್ಯಮಂತ್ರಿ ಅಮರಿಂದರ್ ಸಿಂಗ್, ಪ್ರಮುಖ ಖಾತೆಗಳನ್ನು ಅವರ ಬಳಿಯಿಂದ ವಾಪಸ್ ಪಡೆದಿದ್ದರು. ಬಳಿಕ ಸಚಿವ ಸ್ಥಾನಕ್ಕೆ ಸಿಧು ರಾಜೀನಾಮೆ ನೀಡಿದ್ದರು.

ಪಕ್ಷದ ಆಂತರಿಕ ಕಲಹ ಸರಿಪಡಿಸಲು ಕಾಂಗ್ರೆಸ್ ಹೈಕಮಾಂಡ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮೂವರು ಸದಸ್ಯರ ಸಮಿತಿ ರಚಿಸಿತ್ತು. ಈ ಸಮಿತಿಯು ಸಿಧು ಅವರ ಪರ ನಿಲುವು ತಳೆದಿದ್ದಲ್ಲದೆ ಅವರಿಗೆ ಅವಕಾಶ ಕಲ್ಪಿಸಿ ಸಂಪುಟ ಪುನಾರಚನೆ ಮಾಡುವಂತೆ ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.