ನವದೆಹಲಿ: ‘ಬೆಂಗಳೂರಿನಂತಹ ಮಹಾ ನಗರದಲ್ಲಿ ಅಲ್ಲೊಂದು, ಇಲ್ಲೊಂದು ದೌರ್ಜನ್ಯ ಘಟನೆಗಳು ನಡೆಯುತ್ತವೆ’ ಎಂದು ಹೇಳಿಕೆ ನೀಡಿರುವ ಗೃಹ ಸಚಿವ ಜಿ.ಪರಮೇಶ್ವರ ಅವರಿಂದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಬಿಟಿಎಂ ಲೇಔಟ್‌ನಲ್ಲಿ ಯುವತಿ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಮೇಶ್ವರ ಅವರು ಈ ಹೇಳಿಕೆ ನೀಡಿದ್ದರು.
ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ, ‘ಪರಮೇಶ್ವರ ಇಂತಹ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. 2017ರಲ್ಲೂ ಕೀಳುಮಟ್ಟದ ಹೇಳಿಕೆ ನೀಡಿದ್ದರು. ಈ ಹೇಳಿಕೆ ಅತ್ಯಂತ ಆಘಾತಕಾರಿ. ಸ್ತ್ರೀದ್ವೇಷ ಹಾಗೂ ಅಸಹ್ಯಕರ ಮನಸ್ಥಿತಿಯ ಹೇಳಿಕೆ’ ಎಂದರು.
ಗೃಹ ಸಚಿವರು ಅಪರಾಧಿಗಳ ಬೆನ್ನಿಗೆ ನಿಂತಿದ್ದರಿಂದ ರಾಜ್ಯದ ಪೊಲೀಸರಿಗೆ ಅಪರಾಧಿಗಳನ್ನು ಬಂಧಿಸಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದ ಪೂನಾವಾಲ, ಕಾಂಗ್ರೆಸ್ ಆಡಳಿತವಿರುವ ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧಗಳು ಶೇ 50ರಷ್ಟು ಹೆಚ್ಚಾಗಿದೆ ಎಂದು ಹಂಪಿಯಲ್ಲಿ ಇಸ್ರೇಲ್ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣವನ್ನು ಉಲ್ಲೇಖಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.