ರಾಯಪುರ: ಛತ್ತೀಸಗಢದ ರಾಯಪುರದಲ್ಲಿ ಟ್ರೇಲರ್ ಟ್ರಕ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 13 ಜನ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಯಪುರ -ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ನಾಲ್ವರು ಮಕ್ಕಳು ಹಾಗೂ 9 ಮಂದಿ ಮಹಿಳೆಯರು ಸಾವಿಗೀಡಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಚಟೌಡ್ ಗ್ರಾಮದ ಕುಟುಂಬವೊಂದು ಸಮಾರಂಭದಲ್ಲಿ ಭಾಗವಹಿಸಲು ಬನ್ಸಾರಿ ಗ್ರಾಮಕ್ಕೆ ಹೋಗಿತ್ತು. ಹಿಂತಿರುಗುವಾಗ, ಅವರು ಪ್ರಯಾಣಿಸುತ್ತಿದ್ದ ಟ್ರಕ್ ಖರೋರಾ ಪೊಲೀಸ್ ಠಾಣೆ ವ್ಯಾಪ್ತಿಯ ಸರಗಾಂವ್ ಬಳಿ ಟ್ರೇಲರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಗಾಯಾಳುಗಳನ್ನು ರಾಯಪುರದ ಡಾ. ಭೀಮರಾವ್ ಅಂಬೇಡ್ಕರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಜಿಲ್ಲಾಡಳಿತದ ಅಧಿಕಾರಿಗಳು ಸಹ ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ರಾಯಪುರ ಜಿಲ್ಲಾಧಿಕಾರಿ ಗೌರವ್ ಸಿಂಗ್ ಹೇಳಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದೂ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.