ಕೆ.ಕವಿತಾ ಮತ್ತು ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ
ಹೈದರಾಬಾದ್: ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ಉದ್ಘಾಟನೆಗೆ ಸಿದ್ಧತೆಗಳು ಭರದಿಂದ ಸಾಗಿದ್ದು, ಕೆಲವೇ ದಿನಗಳಲ್ಲಿ ಕೋಟ್ಯಂತರ ಹಿಂದೂಗಳ ಕನಸು ನನಸಾಗಲಿದೆ ಎಂದು ತೆಲಂಗಾಣ ಮಾಜಿ ಸಿಎಂ ಕೆ.ಚಂದ್ರಶೇಖರ್ ಅವರ ಪುತ್ರಿ, ವಿಧಾನಪರಿಷತ್ ಸದಸ್ಯೆ ಕೆ.ಕವಿತಾ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ರಾಮಮಂದಿರ ನಿರ್ಮಾಣದ ವಿಡಿಯೊವನ್ನು ‘ಎಕ್ಸ್’ನಲ್ಲಿ ಹಂಚಿಕೊಂಡಿರುವ ಅವರು, ‘ಅಯೋಧ್ಯೆಯಲ್ಲಿ ಶ್ರೀ ಸೀತಾರಾಮ ಚಂದ್ರ ಸ್ವಾಮಿಯ ವಿಗ್ರಹವನ್ನು ಪ್ರತಿಷ್ಠಾಪಿಸುವ ಶುಭ ಸಮಯ ಸಮೀಪಿಸುತ್ತಿದ್ದು, ಇದು ಕೋಟ್ಯಂತರ ಹಿಂದೂಗಳ ಕನಸು ನನಸಾಗುವ ಕ್ಷಣವಾಗಲಿದೆ. ಈ ಶುಭ ಗಳಿಗೆಯನ್ನು ತೆಲಂಗಾಣ ಸೇರಿದಂತೆ ಇಡೀ ದೇಶವೇ ಸ್ವಾಗತಿಸುತ್ತದೆ’ ಎಂದು ಬರೆದುಕೊಂಡಿದ್ದಾರೆ.
2024ರ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಮಮಂದಿರದ ನಿರ್ಮಾಣ ಹಂತದ ಕಾಮಗಾರಿಗಳು ಭರದಿಂದ ಸಾಗುತ್ತಿವೆ.
ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಿಂಗಳಾಂತ್ಯಕ್ಕೆ ವಾಣಿಜ್ಯ ಕಾರ್ಯಾಚರಣೆಗೆ ಆರಂಭವಾಗಲಿದೆ ಎಂದು ಕೇಂದ್ರದ ವಿಮಾನಯಾನ ಸಚಿವ ಜೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರೊಂದಿಗೆ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣವನ್ನು ಪರಿಶೀಲನೆ ನಡೆಸಿದ್ದೇನೆ. ಮೊದಲ ಹಂತ ಕಾಮಗಾರಿ ಪೂರ್ಣಗೊಂಡಿದ್ದು, ತಿಂಗಳಾಂತ್ಯಕ್ಕೆ ವಿಮಾನಗಳ ಕಾರ್ಯಾಚರಣೆ ಆರಂಭವಾಗಲಿದೆ. ವಿಮಾನ ನಿಲ್ದಾಣದ ಪ್ರಗತಿ ಕುರಿತು ಪ್ರತಿದಿನ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದೇನೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.