
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ
ಪಿಟಿಐ ಚಿತ್ರ
ನವದೆಹಲಿ: ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರವನ್ನು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮಂಗಳವಾರ ಘೋಷಿಸಿದ್ದಾರೆ.
ಈ ಸ್ಫೋಟದಿಂದ ಶಾಶ್ವತವಾಗಿ ಅಂಗವಿಕಲರಾದವರಿಗೆ ₹5 ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ₹2 ಲಕ್ಷ ಪರಿಹಾರವನ್ನು ದೆಹಲಿ ಸರ್ಕಾರ ಘೋಷಿಸಿದೆ.
'ದೆಹಲಿಯಲ್ಲಿ ನಡೆದ ದುರದೃಷ್ಟಕರ ಘಟನೆಯು ಇಡೀ ನಗರವನ್ನೇ ಆಘಾತಕ್ಕೆ ದೂಡಿದೆ. ಇಂತಹ ಕಷ್ಟದ ಸಮಯದಲ್ಲಿ ಸಂತ್ರಸ್ತ ಕುಟುಂಬಗಳ ಜತೆ ದೆಹಲಿ ಸರ್ಕಾರ ನಿಲ್ಲುತ್ತದೆ. ಈ ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ದೇವರು ಕರುಣಿಸಲಿ. ಮೃತಪಟ್ಟವರಿಗೆ ನನ್ನ ಸಂತಾಪಗಳು' ಎಂದು ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಗಂಭೀರವಾಗಿ ಗಾಯಗೊಂಡವರಿಗೆ ₹2 ಲಕ್ಷ ಪರಿಹಾರ ನೀಡಲಾಗುವುದು ಹಾಗೂ ಎಲ್ಲಾ ಗಾಯಾಳುಗಳಿಗೆ ಸರ್ಕಾರವು ಗುಣಮಟ್ಟದ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸುತ್ತದೆ ಎಂದು ರೇಖಾ ತಿಳಿಸಿದ್ದಾರೆ.
ಸದಾ ಜನದಟ್ಟಣೆಯಿಂದ ಕೂಡಿರುವ ಐತಿಹಾಸಿಕ ಕೆಂಪುಕೋಟೆಯ ಬಳಿ ಸಂಚಾರ ಸಿಗ್ನಲ್‌ನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಸೋಮವಾರ ಸಂಜೆ ಭಾರಿ ಸ್ಫೋಟ ಸಂಭವಿಸಿ 12 ಮಂದಿ ಮೃತಪಟ್ಟಿದ್ದಾರೆ. 24ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ದುರ್ಘಟನೆ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ಸೇರಿ ದೇಶದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.