ADVERTISEMENT

ಆಕ್ಷೇಪಾರ್ಹ ಹೇಳಿಕೆ: ರಾಹುಲ್ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ SC ತಡೆ

ಪಿಟಿಐ
Published 20 ಜನವರಿ 2025, 7:19 IST
Last Updated 20 ಜನವರಿ 2025, 7:19 IST
   

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.

2019ರ ಲೋಕಸಭಾ ಚುನಾವಣೆಗೂ ಮುನ್ನ ಜಾರ್ಖಂಡ್‌ನ ಚಾಯ್‌ಬಾಸಾದಲ್ಲಿ ನಡೆಸಿದ ಸಾರ್ವಜನಿಕ ಸಭೆಯಲ್ಲಿ ರಾಹುಲ್‌ ಅವರು ಶಾ ಅವರನ್ನು ‘ಕೊಲೆ ಆರೋಪಿ’ ಎಂದು ಕರೆದಿರುವುದಾಗಿ ಆರೋಪಿಸಿ ಬಿಜೆಪಿ ಕಾರ್ಯಕರ್ತ ನವೀನ್‌ ಝಾ ಎಂಬುವವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿತ್ತು.

ನ್ಯಾಯಮೂರ್ತಿಗಳಾದ ವಿಕ್ರಮ್‌ ನಾಥ್‌ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ರಾಹುಲ್‌ ಅವರ ಮೇಲ್ಮನವಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸುವಂತೆ ಸೂಚಿಸಿ ಜಾರ್ಖಂಡ್‌ ಸರ್ಕಾರ ಮತ್ತು ದೂರುದಾರರಿಗೆ ನೋಟಿಸ್‌ ಜಾರಿಗೊಳಿಸಿತು.

ADVERTISEMENT

‘ನೋಟಿಸ್‌ ಜಾರಿಗೊಳಿಸಿ. ಈ ಪ್ರಕರಣದ ವಿಚಾರಣೆಗೆ ಮುಂದಿನ ಆದೇಶದವರೆಗೂ ತಡೆ ನೀಡಲಾಗಿದೆ’ ಎಂದು ಪೀಠವು ಹೇಳಿತು.

‘ಸಂತ್ರಸ್ತ ವ್ಯಕ್ತಿ ಮಾತ್ರ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಬಹುದು ಎಂದು ಹಲವಾರು ತೀರ್ಪುಗಳು ಹೇಳಿವೆ. ಮೂರನೇ ವ್ಯಕ್ತಿಯಿಂದ ಮಾನನಷ್ಟ ಮೊಕದ್ದಮೆ ಹೂಡಲು ಸಾಧ್ಯವಿಲ್ಲ’ ಎಂದು ರಾಹುಲ್‌ ಪರ ಹಾಜರಿದ್ದ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ಅವರು ಪೀಠಕ್ಕೆ ತಿಳಿಸಿದರು.

ನವೀನ್‌ ಝಾ ಪರ ಹಿರಿಯ ವಕೀಲರಾದ ಮಹೇಶ್‌ ಜೇಠ್ಮಲಾನಿ ವಾದ ಮಂಡಿಸಿದರು.

ದೂರಿಗೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದಲ್ಲಿ ತಮ್ಮ ವಿರುದ್ಧ ನಡೆಯುತ್ತಿರುವ ಕಾನೂನು ಪ್ರಕ್ರಿಯೆ ರದ್ದುಗೊಳಿಸುವಂತೆ ಕೋರಿ ರಾಹುಲ್‌ ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್‌ ಹೈಕೋರ್ಟ್‌ ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ ಮೊರೆಹೋಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.