ಸಾಂದರ್ಭಿಕ ಚಿತ್ರ
ನವದೆಹಲಿ: ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಕ್ಷೇತ್ರಗಳಲ್ಲಿ ತನ್ನ ಹೆಣ್ಣುಮಕ್ಕಳ ಸಾಧನೆಗಳ ಬಗ್ಗೆ ಭಾರತ ಹೆಮ್ಮೆಪಡುತ್ತದೆ ಎಂದು ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, 'ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ. ಹೆಣ್ಣು ಮಕ್ಕಳನ್ನು ಸಬಲೀಕರಣಗೊಳಿಸಲು ಮತ್ತು ಅವಳಿಗೆ ವ್ಯಾಪಕವಾದ ಅವಕಾಶಗಳನ್ನು ಖಚಿತಪಡಿಸಿಕೊಳ್ಳಲು ನಾವು ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ. ಭಾರತವು ಹೆಣ್ಣು ಮಕ್ಕಳ ಸಾಧನೆಗಳ ಬಗ್ಗೆ ಹೆಮ್ಮೆಪಡುತ್ತದೆ. ಅವರ ಸಾಧನೆಗಳು ನಮ್ಮೆಲ್ಲರಿಗೂ ಸ್ಫೂರ್ತಿ ನೀಡುತ್ತಲೇ ಇರುತ್ತವೆ' ಎಂದು ಹೇಳಿದ್ದಾರೆ.
'ಹೆಣ್ಣು ಮಕ್ಕಳ ವಿರುದ್ಧ ಯಾವುದೇ ತಾರತಮ್ಯ ನಡೆಯದಂತೆ ನೋಡಿಕೊಳ್ಳುವಲ್ಲಿ ತಮ್ಮ ಸರ್ಕಾರ ಬದ್ಧವಾಗಿದೆ. ಅವರ ಸಬಲೀಕರಣಕ್ಕೆ ಕೊಡುಗೆ ನೀಡಿದ ಶಿಕ್ಷಣ, ತಂತ್ರಜ್ಞಾನ, ಕೌಶಲ್ಯ ಮತ್ತು ಆರೋಗ್ಯದಂತಹ ಕ್ಷೇತ್ರಗಳ ಮೇಲೆ ತಮ್ಮ ಸರ್ಕಾರ ಗಮನಹರಿಸಿದೆ' ಎಂದೂ ಮೋದಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು 2008ರಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಪ್ರಾರಂಭಿಸಿತು. ಭಾರತದಲ್ಲಿ ಹೆಣ್ಣು ಮಕ್ಕಳ ಹಕ್ಕುಗಳು ಮತ್ತು ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಜ. 24ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲು ಮುಂದಾಯಿತು. ಅಂದಿನಿಂದ ಪ್ರತಿ ವರ್ಷ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.
ಈ ವರ್ಷದ ಧ್ಯೇಯ ವಾಕ್ಯ–'ಉಜ್ವಲ ಭವಿಷ್ಯಕ್ಕಾಗಿ ಹೆಣ್ಣು ಮಕ್ಕಳ ಸಬಲೀಕರಣ'
ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಯ ಬಗ್ಗೆ ಜಾಗೃತಿ ಮೂಡಿಸುವುದು. ಹೆಣ್ಣು ಶಿಶುಹತ್ಯೆ, ಲಿಂಗ ಅಸಮಾನತೆ ಹಾಗೂ ದೈಹಿಕ ದೌರ್ಜನ್ಯ ಸೇರಿದಂತೆ ಇತರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವುದಾಗಿದೆ. ಈ ಹಿನ್ನೆಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಉಪಕ್ರಮಗಳನ್ನು ಜಾರಿಗೆ ತಂದಿವೆ. ಅವುಗಳು ಹೀಗಿವೆ..
ಬೇಟಿ ಬಚಾವೋ, ಬೇಟಿ ಪಢಾವೋ (BBBP)
ಸಾರ್ವಜನಿಕ ಭವಿಷ್ಯ ನಿಧಿ (PPF)
ಸುಕನ್ಯಾ ಸಮೃದ್ಧಿ ಯೋಜನೆ (SSY)
ಸಮಗ್ರ ಮಕ್ಕಳ ರಕ್ಷಣಾ ಯೋಜನೆ (ICPS)
ಪ್ರಧಾನ ಮಂತ್ರಿ ಕನ್ಯಾ ವಿಕಾಸ ಯೋಜನೆ
ಭಾರತದಲ್ಲಿ ಹೆಣ್ಣು ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಹಲವಾರು ಕಾನೂನು ಕ್ರಮಗಳು ಜಾರಿಯಲ್ಲಿವೆ.
ಬಾಲ್ಯ ವಿವಾಹ ನಿಷೇಧ ಕಾಯಿದೆ–2006
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆ–2012
(ವಿವಿಧ ಮೂಲಗಳ ಮಾಹಿತಿ ಆಧರಿಸಿ ಬರೆದ ಸುದ್ದಿ)
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.