ADVERTISEMENT

ಪ್ರಜ್ವಲ್ ವಿರುದ್ಧ ಕ್ರಮಕ್ಕೆ ರಾಜ್ಯ ಸರ್ಕಾರ ವಿಳಂಬ ಮಾಡಿದ್ದೇಕೆ: BJP ಪ್ರಶ್ನೆ

ಪಿಟಿಐ
Published 30 ಏಪ್ರಿಲ್ 2024, 13:46 IST
Last Updated 30 ಏಪ್ರಿಲ್ 2024, 13:46 IST
   

ನವದೆಹಲಿ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅಮಾನತುಗೊಳಿಸಿದ ಜೆಡಿಎಸ್ ಕ್ರಮವನ್ನು ಸ್ವಾಗತಿಸಿರುವ ಬಿಜೆಪಿ, ಆರೋಪಿ ವಿರುದ್ಧ ಕಾನೂನು ಕ್ರಮಕ್ಕೆ ಸಂಪೂರ್ಣ ಬೆಂಬಲವಿದೆ ಎಂದಿದೆ. ಜತೆಗೆ ಪ್ರಕರಣ ಕುರಿತು ಕ್ರಮ ಕೈಗೊಳ್ಳಲು ಕರ್ನಾಟಕ ರಾಜ್ಯ ಸರ್ಕಾರವು ಇಷ್ಟು ವಿಳಂಬ ಮಾಡಿದ್ದು ಏಕೆ ಎಂಬ ಪ್ರಶ್ನೆಯನ್ನು ಮುಂದಿಟ್ಟಿದೆ.

‘ಕಾನೂನು ಸುವ್ಯವಸ್ಥೆ ರಾಜ್ಯ ಸರ್ಕಾರದ ವಿಷಯವಾಗಿರುವಾಗ, ಪ್ರಜ್ವಲ್ ವಿರುದ್ಧ ಕರ್ನಾಟಕ ಸರ್ಕಾರ ಏಕೆ ಕ್ರಮಗೊಂಡಿರಲಿಲ್ಲ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ.

ಮನೆಗೆಲಸ ಮಾಡುತ್ತಿದ್ದ ಮಹಿಳೆ ಪ್ರಕರಣ ಕುರಿತು ನೀಡಿದ ದೂರಿನನ್ವಯ ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ಶಾಸಕ ಎಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಬೆದರಿಕೆ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. 

ADVERTISEMENT

ಈ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದ ಬೆನ್ನಲ್ಲೇ, ‘ರಾಜ್ಯದಲ್ಲಿ ಯಾರ ಸರ್ಕಾರವಿದೆ?‘ ಎಂದು ಕೇಳುವ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿರುಗೇಟು ನೀಡಿದ್ದಾರೆ. 

ಗುವಾಹಟಿಯಲ್ಲಿ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಶಾ, ‘ಪ್ರಜ್ವಲ್ ಪ್ರಕರಣ ಅತ್ಯಂತ ನೋವಿನ ಸಂಗತಿ. ಇದನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಲು ಸಾಧ್ಯವಿಲ್ಲ. ನಾರಿ ಶಕ್ತಿಗೆ ಅವಮಾನ ಆಗುವುದನ್ನು ಬಿಜೆಪಿ ಎಂದಿಗೂ ಸಹಿಸುವುದಿಲ್ಲ’ ಎಂದಿದ್ದಾರೆ.

ಇದೇ ಪ್ರಕರಣ ಕುರಿತು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ದೆಹಲಿಯಲ್ಲಿ ಪ್ರತಿಕ್ರಿಯಿಸಿ, ‘ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಬಿಜೆಪಿ ಸದಾ ಶೂನ್ಯ ಸಹಿಷ್ಣುತೆ ಹೊಂದಿದೆ. ಆದರೆ ಕಾಂಗ್ರೆಸ್ ಮಾತ್ರ ಇಬ್ಬಗೆಯ ನೀತಿ ಅನುಸರಿಸುತ್ತಿದೆ. ಕರ್ನಾಟಕ ಸರ್ಕಾರಕ್ಕೆ ತಿಂಗಳ ಹಿಂದೆಯೇ ಈ ಮಾಹಿತಿ ಇದೆ ಎಂದಾದರೆ, ಕ್ರಮ ಕೈಗೊಳ್ಳಲಿಲ್ಲವೇಕೆ’ ಎಂದು ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.