ಕೋಲ್ಕತ್ತ: ಇಲ್ಲಿನ ಆರ್.ಜಿ.ಕರ್ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಕೊಲೆ ಕೃತ್ಯದ ಅಪರಾಧಿ ಸಂಜಯ್‌ರಾಯ್‌ಗೆ ಮರಣದಂಡನೆ ವಿಧಿಸಬೇಕು ಎಂದು ಕೋರಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಕಲ್ಕತ್ತಾ ಹೈಕೋರ್ಟ್ ಶುಕ್ರವಾರ ಪುರಸ್ಕರಿಸಿದೆ.
ಆದರೆ, ಇದೇ ಪ್ರಕರಣದಲ್ಲಿ ಅಪರಾಧಿ ರಾಯ್‌ಗೆ ನೀಡಲಾದ ಶಿಕ್ಷೆಯ ಪ್ರಮಾಣವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ ಮೇಲ್ಮನವಿಯನ್ನು ಅಂಗೀಕರಿಸಲು ವಿಭಾಗೀಯ ಪೀಠ ನಿರಾಕರಿಸಿದೆ.
ರಾಯ್‌ಗೆ ನೀಡಲಾದ ಶಿಕ್ಷೆಯನ್ನು ಪ್ರಶ್ನಿಸಿ ಸಿಬಿಐ ಮತ್ತು ರಾಜ್ಯ ಸರ್ಕಾರ ಎರಡೂ ಪ್ರತ್ಯೇಕವಾಗಿ ಕಲ್ಕತ್ತಾ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದವು. ಅಲ್ಲದೇ ರಾಯ್‌ಗೆ ಮರಣದಂಡನೆ ವಿಧಿಸಬೇಕೆಂದು ಕೋರಿದ್ದವು. ‘ಕೆಳಹಂತದ ವಿಚಾರಣಾ ನ್ಯಾಯಾಲಯವು ವಿಧಿಸಿರುವ ಶಿಕ್ಷೆ ಸಾಲದು’ ಎಂದು ಸಿಬಿಐ ಅರ್ಜಿಯಲ್ಲಿ ಪ್ರತಿಪಾದಿಸಿತ್ತು.
'ಶಿಕ್ಷೆಯ ಪ್ರಮಾಣವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಲಾಗಿರುವ ಮೇಲ್ಮನವಿಯನ್ನು ವಿಚಾರಣೆಗೆ ಪುರಸ್ಕರಿಸಲಾಗಿದೆ' ಎಂದು ನ್ಯಾಯಮೂರ್ತಿಗಳಾದ ದೇಬಾಂಗ್ಸು ಬಸಕ್ ಮತ್ತು ಮೊಹಮ್ಮದ್ ಸಬ್ಬರ್ ರಶೀದಿ ಅವರನ್ನೊಳಗೊಂಡ ವಿಭಾಗೀಯ ಪೀಠ ಹೇಳಿದೆ.
2024ರ ಆಗಸ್ಟ್ 9ರಂದು ಇಲ್ಲಿನ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆಯೂ ಆಗಿರುವ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಹತ್ಯೆ ಮಾಡಲಾಗಿತ್ತು. ಇದು ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆ ನಡೆದ ಮರುದಿನ ಕೋಲ್ಕತ್ತ ಪೊಲೀಸರು ಸಂಜಯ್‌ರಾಯ್ ನನ್ನು ಬಂಧಿಸಿದ್ದರು.
ಬಳಿಕ ಕಲ್ಕತ್ತಾ ಹೈಕೋರ್ಟ್ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಅಕ್ಟೋಬರ್ 7ರಂದು ವಿಚಾರಣಾ ನ್ಯಾಯಾಲಯದ ಮುಂದೆ ಸಿಬಿಐ ಆರೋಪಪಟ್ಟಿ ಸಲ್ಲಿಸಿತ್ತು.
ಪ್ರಕರಣದಲ್ಲಿ ರಾಯ್ ದೋಷಿ ಎಂದು ಘೋಷಿಸಿದ ನಂತರ, ಕೆಳಹಂತದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಅನಿರ್ಬನ್ ದಾಸ್ ಅವರು, ಅಪರಾಧಿಗೆ ಜೀವನಪರ್ಯಂತ ಜೈಲು ಶಿಕ್ಷೆ ವಿಧಿಸಿ ಜನವರಿ 20ರಂದು ಆದೇಶ ನೀಡಿದ್ದರು.
'ಇದು, ಗಲ್ಲು ಶಿಕ್ಷೆಯನ್ನು ವಿಧಿಸುವಂತಹ ಅಪರೂಪದಲ್ಲಿ ಅಪರೂಪದ ಪ್ರಕರಣವಲ್ಲ’ ಎಂದು ಅವರು ಆದೇಶ ನೀಡುವ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.