ಮಹಾರಾಷ್ಟ್ರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾನಾ ಪಟೋಲೆ, ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಮತ್ತು ಕಾಂಗ್ರೆಸ್ ನಾಯಕ ಬಾಳಾಸಾಹೇಬ್ ಥೋರಟ್
ಪಿಟಿಐ ಚಿತ್ರ
ನಾಗ್ಪುರ: ಮಹಾರಾಷ್ಟ್ರದ ವಿಧಾನಸಭಾ ಚುನಾವಣೆ ಬೆನ್ನಲ್ಲೇ ಎದುರಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (UBT) ಪಕ್ಷವು ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿರುವುದು ಮಹಾ ವಿಕಾಸ ಅಘಾಡಿಯಲ್ಲಿನ (MVA) ಒಗ್ಗಟ್ಟಿನ ಕುರಿತು ಪ್ರಶ್ನೆಗಳನ್ನು ಮೂಡಿಸಿವೆ.
ಈ ಕುರಿತು ಮಾಹಿತಿ ನೀಡಿದ ಪಕ್ಷದ ಮುಖಂಡ ಸಂಜಯ್ ರಾವುತ್, ‘ಮುಂಬೈ, ಠಾಣೆ, ನಾಗ್ಪುರ ಹಾಗೂ ಇತರ ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯ್ತಿ ಚುನಾವಣೆಗಳಲ್ಲಿ ಪಕ್ಷವು ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಮೈತ್ರಿಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಕೆಲಸ ಇರದು. ಸ್ವತಂತ್ರ ಸ್ಪರ್ಧೆಯಿಂದ ಪಕ್ಷದ ಬೆಳಗವಣಿಗೆ ಸಾಧ್ಯ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆಯೇ ಎಂಬುದನ್ನು ಆ ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ’ ಎಂದಿದ್ದಾರೆ.
ಶಿವಸೇನಾ (ಯುಬಿಟಿ) ನಿರ್ಧಾರವು ಎಂವಿಎ ಮೈತ್ರಿಯಲ್ಲಿರುವ ಎಲ್ಲಾ ಮೂರೂ ಪಕ್ಷಗಳ ಮೇಲೆ ಪ್ರಭಾವ ಬೀರಲಿದೆ ಎಂದು ಶರದ್ ಪವಾರ್ ಹೇಳಿದ್ದಾರೆ.
ದೆಹಲಿ ವಿಧಾನಸಭೆಗೆ ಫೆ. 5ರಂದು ನಡೆಯಲಿರುವ ಚುನಾವಣೆಗೆ ಸಂಬಂಧಿಸಿಂತೆ ಎಎಪಿಯನ್ನು ಬೆಂಬಲಿಸುವುದಾಗಿ ಉದ್ಧವ್ ಠಾಕ್ರೆ ಹೇಳಿದ್ದರು.
ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 288 ಕ್ಷೇತ್ರಗಳಲ್ಲಿ ಬಿಜೆಪಿ, ಶಿವಸೇನಾ ಹಾಗೂ ಎನ್‌ಸಿಪಿ ಒಳಗೊಂಡ ಮಹಾಯುತಿ ಮೈತ್ರಿಯು 230 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಎಂವಿಎ ಮೈತ್ರಿ 46 ಕ್ಷೇತ್ರಗಳಲ್ಲಷ್ಟೇ ಗೆಲುವು ಸಾಧಿಸಿದ್ದು, ಶಿವಸೇನಾ (ಯುಬಿಟಿ)– 20, ಕಾಂಗ್ರೆಸ್– 16 ಮತ್ತು ಎನ್‌ಸಿಪಿ (ಎಸ್‌ಪಿ) 10 ಕ್ಷೇತ್ರಗಳನ್ನು ಗೆಲ್ಲಲಷ್ಟೇ ಸಾಧ್ಯವಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.