ನವದೆಹಲಿ: ರಾಷ್ಟ್ರೀಯ ಲೋಕ ದಳ(ಆರ್‌ಎಲ್‌ಡಿ) ಮುಖ್ಯಸ್ಥ ಜಯಂತ್ ಸಿಂಗ್, ಇಂಡಿಯಾ ಮೈತ್ರಿಕೂಟ ತೊರೆದು ಬಿಜೆಪಿ ನೇತೃತ್ವದ ಎನ್‌ಡಿಎಗೆ ಸೇರ್ಪಡೆಗೊಂಡಿದ್ದಾರೆ.
ಮೈತ್ರಿಕೂಟ ಸೇರಿದ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಜಯಂತ್ ಸಿಂಗ್ ಔಪಚಾರಿಕವಾಗಿ ಭೇಟಿಯಾಗಿದ್ದಾರೆ.
‘ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶ ಅಭಿವೃದ್ದಿಯತ್ತ ಸಾಗುತ್ತಿದೆ. ದೇಶದ ಹಿತಾಸಕ್ತಿಯ ದೃಷ್ಟಿಯಿಂದ ಈ ನಿರ್ಣಯ ತೆಗೆದುಕೊಳ್ಳಲಾಗಿದೆ’ ಎಂದು ಜಯಂತ್ ಸಿಂಗ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಉತ್ತರ ಪ್ರದೇಶದ ಎರಡು ಸ್ಥಾನಗಳಲ್ಲಿ ಆರ್‌ಎಲ್‌ಡಿ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ತಮ್ಮ ತಾತ, ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ಘೋಷಿಸಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನು ಜಯಂತ್ ಸಿಂಗ್ ಶ್ಲಾಘಿಸಿದ್ದರು. ಈ ಬೆನ್ನಲ್ಲೇ ಸಿಂಗ್ ಎನ್‌ಡಿಎ ಸೇರುತ್ತಾರೆ ಎಂಬ ಊಹಾಪೋಹಗಳು ತೀವ್ರಗೊಂಡಿದ್ದವು.
ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದೊಂದಿಗೆ ಕೈಜೋಡಿಸುವುದಾಗಿ ಈ ಹಿಂದೆ ಹೇಳಿದ್ದ ಜಯಂತ್ ಸಿಂಗ್, ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ಘೋಷಣೆ ಮಾಡಿರುವುದೇ ತಮ್ಮ ನಿರ್ಧಾರಕ್ಕೆ ಪ್ರಮುಖ ಕಾರಣವೆಂದು ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.