ADVERTISEMENT

ಅಕ್ರಮ ಹಣ ವರ್ಗಾವಣೆ: ಇ.ಡಿ ಮುಂದೆ ಕಾರ್ತಿ, ವಾದ್ರಾ ಹಾಜರು

ಪಿಟಿಐ
Published 7 ಫೆಬ್ರುವರಿ 2019, 19:33 IST
Last Updated 7 ಫೆಬ್ರುವರಿ 2019, 19:33 IST

ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದ ಪ್ರತ್ಯೇಕ ಪ್ರಕರಣಗಳಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್‌ ವಾದ್ರಾ ಮತ್ತು ಕಾಂಗ್ರೆಸ್‌ ಮುಖಂಡ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಗುರುವಾರ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾದರು.

ಕಾರ್ತಿ ಚಿದಂಬರಂ ಕೇಂದ್ರ ದೆಹಲಿಯಲ್ಲಿರುವ ಕಚೇರಿಯಲ್ಲಿ ಬೆಳಿಗ್ಗೆ 11ಕ್ಕೆ ಹಾಜರಾದರು. ಐಎನ್‌ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿ ಅವರನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು ಎಂದು ಮೂಲಗಳು ತಿಳಿಸಿವೆ.

ಕಾರ್ತಿ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯ ಕ್ರಿಮಿನಲ್‌ ಪ್ರಕರಣ ದಾಖಲಿಸಿದೆ.

ADVERTISEMENT

25 ನಿಮಿಷಗಳ ಬಳಿಕ ರಾಬರ್ಟ್‌ ವಾದ್ರಾ ವಕೀಲರ ಜತೆ ಜಾರಿ ನಿರ್ದೇಶನಾಲಯ ಕಚೇರಿಗೆ ಬಂದರು.ಲಂಡನ್‌ನಲ್ಲಿ ಆಸ್ತಿ ಖರೀದಿಸಲು ಅಕ್ರಮ ವಹಿವಾಟು ನಡೆಸಿರುವ ಆರೋಪವನ್ನು ವಾದ್ರಾ ಎದುರಿಸುತ್ತಿದ್ದಾರೆ. ಬುಧವಾರವೂ ವಾದ್ರಾ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.

ಪಿ. ಚಿದಂಬರಂ ಅವರನ್ನು ಸಹ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಶುಕ್ರವಾರ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.