
ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಪಿಟಿಐ ಚಿತ್ರ
ನವದೆಹಲಿ: ಬಿಜೆಪಿ, ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದಲೇ ದೇಶದಲ್ಲಿ ಕಾನೂನು ಸುವ್ಯವಸ್ಥೆಯ ಸಮಸ್ಯೆ ಉದ್ಭವಿಸುತ್ತಿರುವುದರಿಂದ, ಆರ್‌ಎಸ್‌ಎಸ್ ನಿಷೇಧಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಹೇಳಿದ್ದಾರೆ.
ಸರ್ದಾರ್ ವಲ್ಲಭಭಾಯ್ ಪಟೇಲ್ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಿಗೆ ಖರ್ಗೆ ತಿರುಗೇಟು ನೀಡಿದ್ದಾರೆ.
ಮಹಾತ್ಮ ಗಾಂಧಿ ಅವರ ಹತ್ಯೆಯ ಬಳಿಕ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್) ಟೀಕಿಸಿದ್ದ ಪಟೇಲ್ ಅವರ ಹೇಳಿಕೆಗಳನ್ನು ಉಲ್ಲೇಖಿಸಿದ್ದಾರೆ.
ಆರ್‌ಎಸ್‌ಎಸ್ ನಿಷೇಧ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖರ್ಗೆ, ‘ನಿಷೇಧಿಸಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ’ ಎಂದಿದ್ದಾರೆ.
‘ಇಂದು ಸರ್ದಾರ್ ವಲ್ಲಭಭಾಯ್ ಪಟೇಲ್ ಜನ್ಮದಿನ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ. ‘ಉಕ್ಕಿನ ಮನುಷ್ಯ’ ಮತ್ತು ‘ಉಕ್ಕಿನ ಮಹಿಳೆ’ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದು, ಏಕತೆ ಕಾಪಾಡಿಕೊಳ್ಳಲು ಶ್ರಮಿಸಿದ್ದಾರೆ. ಇದು ಕಾಂಗ್ರೆಸ್‌ನ ಐತಿಹ್ಯ ಮತ್ತು ಕಾಣಿಕೆ’ ಎಂದು ಹೇಳಿದರು.
‘ಮಹಾತ್ಮ ಗಾಂಧಿ ಅವರ ಹತ್ಯೆಯ ದುರಂತಕ್ಕೆ ಕಾರಣವಾದ ವಾತಾವರಣವನ್ನು ಆರ್‌ಎಸ್‌ಎಸ್ ಸೃಷ್ಟಿಸಿದೆ’ ಎಂದು ಶ್ಯಾಮಾ ಪ್ರಸಾದ್ ಮುಖರ್ಜಿ ಅವರಿಗೆ ಆಗಿನ ಗೃಹ ಸಚಿವ ಪಟೇಲ್ ಅವರು ಬರೆದ ಪತ್ರವನ್ನು ಖರ್ಗೆ ಉಲ್ಲೇಖಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.