ADVERTISEMENT

ಬದಲಾದ ಆರ್‌ಟಿಇ ನಿಯಮಾವಳಿ: ಪರಿಶೀಲನೆ

ರಾಜ್ಯ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2019, 20:00 IST
Last Updated 19 ಆಗಸ್ಟ್ 2019, 20:00 IST
   

ನವದೆಹಲಿ: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿ ಬಡ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಸೀಟು ನೀಡುವುದರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ವಿನಾಯಿತಿ ನೀಡಿ ರಾಜ್ಯ ಸರ್ಕಾರ ರೂಪಿಸಿರುವ ನಿಯಮಗಳ ಸಿಂಧುತ್ವದ ಕುರಿತು ಪರಿಶೀಲನೆ ನಡೆಸಲು ಸುಪ್ರೀಂ ಕೋರ್ಟ್‌ ಸೋಮವಾರ ನಿರ್ಧರಿಸಿದೆ.

ಬದಲಾದ ನಿಯಮಗಳ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠ, ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕೆ ಸಂಬಂಧಿಸಿದ ಕರ್ನಾಟಕ ಮಕ್ಕಳ ಹಕ್ಕುಗಳ ನಿಯಮ– 4ಕ್ಕೆ ಸರ್ಕಾರ ತಂದಿರುವ ತಿದ್ದುಪಡಿಯನ್ನು ಎತ್ತಿ ಹಿಡಿದು ರಾಜ್ಯ ಹೈಕೋರ್ಟ್‌ ಕಳೆದ ಮೇ 31ರಂದು ನೀಡಿರುವ ತೀರ್ಪಿಗೆ ತಡೆ ನೀಡಲು ನಿರಾಕರಿಸಿದ ಪೀಠ, ಈ ನಿಯಮಗಳ ಸಿಂಧುತ್ವದ ಕುರಿತು ಸರ್ಕಾರದ ಪರ ವಕೀಲರು ಸ್ಪಷ್ಟನೆ ನೀಡಲಿ ಎಂದು ಹೇಳಿತು.

ADVERTISEMENT

ಆರ್‌ಟಿಇ ಕಾಯ್ದೆಗೆ ತಿದ್ದುಪಡಿ ತಂದು ರೂಪಿಸಿರುವ ನಿಯಮಗಳು ಬಡಜನರ ವಿರೋಧಿಯಾಗಿವೆ. ಬಡ ಮತ್ತು ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಇದರಿಂದ ಅನ್ಯಾಯವಾಗುತ್ತಿದೆ. ಮಕ್ಕಳ ಹಕ್ಕುಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಇಂತಹ ನಿಯಮಗಳಿಂದಾಗಿ ಕಾಯ್ದೆ ಅಡಿ ಪ್ರವೇಶ ಪಡೆಯುವ ಮಕ್ಕಳ ಸಂಖ್ಯೆ ಶೇ 92ರಷ್ಟು ಇಳಿಕೆಯಾಗಿದೆ ಎಂದು ಅರ್ಜಿದಾರರ ಪರ ವಕೀಲೆ ಮೀನಾಕ್ಷಿ ಅರೋರಾ ನ್ಯಾಯಪೀಠಕ್ಕೆ ತಿಳಿಸಿದರು.

ಸರ್ಕಾರಿ ಶಾಲೆಗಳು ಲಭ್ಯವಿಲ್ಲದ ಕಡೆ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸುವ ಹೊಣೆಗಾರಿಕೆ ಖಾಸಗಿ, ಅನುದಾನರಹಿತ ಶಿಕ್ಷಣ ಸಂಸ್ಥೆಗಳದ್ದಾಗಿದೆ ಎಂದು ಸಾರಿದ್ದ ಈ ಕಾಯ್ದೆಯ ಮಹತ್ವವನ್ನೇ ಹೈಕೋರ್ಟ್ ನಿರ್ಲಕ್ಷಿಸಿದೆ ಎಂದು ಅವರು ದೂರಿದರು. ಬಿ.ಎನ್. ಯೋಗಾನಂದ ನೇತೃತ್ವದ ಆರ್‌ಟಿಇ ವಿದ್ಯಾರ್ಥಿಗಳು ಮತ್ತು ಪಾಲಕರ ಸಂಘ ಈ ಮೇಲ್ಮನವಿ ಸಲ್ಲಿಸಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.