ADVERTISEMENT

ಉಕ್ರೇನ್‌ನಲ್ಲಿ ಸಿಲುಕಿದ 200 ಕಾಶ್ಮೀರಿ ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2022, 14:17 IST
Last Updated 24 ಫೆಬ್ರುವರಿ 2022, 14:17 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಯುದ್ಧಪೀಡಿತ ಉಕ್ರೇನ್‌ನಲ್ಲಿ ಕಾಶ್ಮೀರದ ಸುಮಾರು 200 ವಿದ್ಯಾರ್ಥಿಗಳು ಸಿಲುಕಿದ್ದು, ಜಮ್ಮು ಮತ್ತು ಕಾಶ್ಮೀರ ಆಡಳಿತವು ಎಲ್ಲ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ವಾಪಸ್‌ ಕರೆತರುವ ಪ್ರಕ್ರಿಯೆಯನ್ನು ಆರಂಭಿಸಿದೆ.

ಮುಂಬರುವ ದಿನಗಳಲ್ಲಿ ಉಕ್ರೇನ್‌ನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡಲಿದೆ ಎಂಬ ಮಾಹಿತಿಯಿಂದಾಗಿ ಕಾಶ್ಮೀರಿ ವಿದ್ಯಾರ್ಥಿಗಳ ಕುಟುಂಬಗಳು ಆತಂಕಕ್ಕೆ ಒಳಗಾಗಿದ್ದು, ಉಕ್ರೇನ್‌ನಲ್ಲಿ ಓದುತ್ತಿರುವ ಕಾಶ್ಮೀರಿ ವಿದ್ಯಾರ್ಥಿಗಳ ಪೋಷಕರು ಶ್ರೀನಗರದ ಪತ್ರಿಕಾ ಕಚೇರಿಗಳ ಸಮುಚ್ಚಯ ಆವರಣದಲ್ಲಿ ಸೇರಿ ತಮ್ಮ ಮಕ್ಕಳನ್ನು ಸುರಕ್ಷಿತವಾಗಿ ಕರೆತರುವಂತೆ ಒತ್ತಾಯಿಸಲು ನಿರ್ಧರಿಸಿದ್ದಾರೆ.

‘ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಅವರ ಸೂಚನೆಯ ಮೇರೆಗೆ ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ಅತ್ಯಂತ ತ್ವರಿತಗತಿಯಲ್ಲಿ ಕರೆತರುವ ನಿಟ್ಟಿನಲ್ಲಿ ನಾವು ಉಕ್ರೇನ್‌ ರಾಯಭಾರ ಕಚೇರಿಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಎಲ್ಲ ವಿದ್ಯಾರ್ಥಿಗಳನ್ನೂ ಸುರಕ್ಷಿತವಾಗಿ ಕರೆತರಲಾಗುವುದು’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

‘ಕಾಶ್ಮೀರದ 180–200 ವಿದ್ಯಾರ್ಥಿಗಳು ಉಕ್ರೇನ್‌ನ ವಿವಿಧ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ಕಲಿಯುತ್ತಿದ್ದಾರೆ. ರಷ್ಯಾ ಸೇನೆಯು ಯುದ್ಧ ಕಾರ್ಯಾಚರಣೆಯನ್ನು ಆರಂಭಿಸಿರುವ ಹಿನ್ನೆಲೆಯಲ್ಲಿ ಅವರೆಲ್ಲ ಅಲ್ಲಿ ಸಿಲುಕಿಕೊಂಡಿದ್ದಾರೆ’ ಎಂದು ಜಮ್ಮು ಮತ್ತು ಕಾಶ್ಮೀರ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವಕ್ತಾರ ನಾಸಿರ್‌ ಖುಹೆಹಾಮಿ ಹೇಳಿದರು.

‘ನಮ್ಮ ಮಕ್ಕಳು ಸದ್ಯ ವಸತಿ ಸೌಕರ್ಯ ಕಲ್ಪಿಸಿರುವ ಸ್ಥಳಗಳಲ್ಲೇ ಇದ್ದಾರೆ. ಯಾವುದೇ ಆತಂಕಕ್ಕೆ ಒಳಗಾಗದೇ ಮನೆಯಲ್ಲೆ ಇರುವಂತೆ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿಗಳು ಸೂಚಿಸಿವೆ’ ಎಂದು ಉಕ್ರೇನ್‌ನಲ್ಲಿರುವ ಕಾಶ್ಮೀರದ ವೈದ್ಯ ವಿದ್ಯಾರ್ಥಿಯೊಬ್ಬರ ಪೋಷಕರು ತಿಳಿಸಿದರು.

‘ಉಕ್ರೇನ್‌ನಲ್ಲಿ ಓದುತ್ತಿರುವ ನಮ್ಮ ಮಗ ಸಂಪರ್ಕಕ್ಕೆ ಸಿಕ್ಕಿಲ್ಲ. ಇದರಿಂದ ಭಯವಾಗುತ್ತಿದೆ’ ಎಂದು ಶ್ರೀನಗರದ ಹಳೆ ಬಡಾವಣೆಯ ನಿವಾಸಿ ಐಜಾಜ್‌ ಅಹ್ಮದ್‌ ಆತಂಕ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.