ADVERTISEMENT

ರಷ್ಯಾ-ಉಕ್ರೇನ್ ಸಂಘರ್ಷ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಮಾರ್ಚ್ 2022, 9:10 IST
Last Updated 13 ಮಾರ್ಚ್ 2022, 9:10 IST
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆ (ಐಎಎನ್‌ಎಸ್ ಚಿತ್ರ)
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆ (ಐಎಎನ್‌ಎಸ್ ಚಿತ್ರ)   

ನವದೆಹಲಿ: ರಷ್ಯಾ ಮತ್ತು ಉಕ್ರೇನ್ ನಡುವೆ ಸಂಘರ್ಷ ನಡೆಯುತ್ತಿರುವಂತೆಯೇ ಭದ್ರತಾ ಸನ್ನದ್ಧತೆ ಮತ್ತು ಜಾಗತಿಕ ಸನ್ನಿವೇಶದ ಕುರಿತು ಪರಿಶೀಲನೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಭಾನುವಾರ ಉನ್ನತ ಮಟ್ಟದ ಸಭೆ ನಡೆದಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಿದೇಶಾಂಗ ಸಚಿವ ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್, ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ ಸೇರಿದಂತೆ ಉನ್ನತ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಫೆಬ್ರುವರಿ 24ರಂದು ಉಕ್ರೇನ್ ಮೇಲೆ ರಷ್ಯಾ ವಿಶೇಷ ಸೇನಾ ಕಾರ್ಯಾಚರಣೆ ಪ್ರಾರಂಭಿಸಿದ ಬಳಿಕ ಪ್ರಧಾನಿ ಮೋದಿ, ಸಚಿವ ಸಂಪುಟದ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಹಲವು ಸುತ್ತಿನ ಉನ್ನತ ಮಟ್ಟದ ಸಭೆಗಳನ್ನು ನಡೆಸಿದ್ದಾರೆ.

ಬಳಿಕ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ನಾಗರಿಕರನ್ನು ಕರೆತರಲು 'ಆಪರೇಷನ್ ಗಂಗಾ' ಕಾರ್ಯಾಚರಣೆಗೆ ಚಾಲನೆ ನೀಡಲಾಗಿತ್ತು.

ಇಲ್ಲಿಯವರೆಗೆ ಯುದ್ಧಪೀಡಿತ ಪ್ರದೇಶದಿಂದ ಸರ್ಕಾರವು 20,000ಕ್ಕೂ ಹೆಚ್ಚು ಭಾರತೀಯರನ್ನು ಉಕ್ರೇನ್ ನೆರೆಯ ರಾಷ್ಟ್ರಗಳ ಮೂಲಕ ಸ್ಥಳಾಂತರಿಸಲು ಯಶಸ್ವಿಯಾಗಿದೆ.

ಭಾರತೀಯರ ಸ್ಥಳಾಂತರಕ್ಕೆ ಸಂಬಂಧಿಸಿದಂತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಅವರೊಂದಿಗೂ ಮೋದಿ ಮಾತುಕತೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.