ಅಖಿಲೇಶ್ ಯಾದವ್
ಲಖನೌ: ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಅಧಿಕೃತ ಫೇಸ್‌ಬುಕ್ ಖಾತೆಯನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಇದೇ ವಿಚಾರ ಆಡಳಿತಾರೂಢ ಬಿಜೆಪಿ ಹಾಗೂ ಎಸ್‌ಸಿ ನಡುವೆ ರಾಜಕೀಯ ಜಟಾಪಟಿಗೆ ಕಾರಣವಾಗಿದೆ.
ಎಂಟು ಮಿಲಿಯನ್‌ಗಿಂತಲೂ (ಅಂದಾಜು 80 ಲಕ್ಷ) ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಅಖಿಲೇಶ್ ಯಾದವ್ ಅವರ ಖಾತೆಯನ್ನು ಶುಕ್ರವಾರ ಸಂಜೆ 6 ಗಂಟೆ ಸುಮಾರಿಗೆ ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅಖಿಲೇಶ್ ಯಾದವ್ ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವ ಮೂಲಕ ಬಿಜೆಪಿ ಸರ್ಕಾರದ ತಪ್ಪುಗಳನ್ನು ಎತ್ತಿ ತೋರಿಸಲು ಮತ್ತು ಬೆಂಬಲಿಗರೊಂದಿಗೆ ಸಂಪರ್ಕ ಸಾಧಿಸಲು ಈ ಪುಟವನ್ನು ನಿಯಮಿತವಾಗಿ ಬಳಸುತ್ತಿದ್ದರು.
‘ದೇಶದ ಮೂರನೇ ಅತಿದೊಡ್ಡ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಖಿಲೇಶ್ ಯಾದವ್ ಜಿ ಅವರ ಫೇಸ್‌ಬುಕ್ ಖಾತೆಯನ್ನು ಅಮಾನತುಗೊಳಿಸಿರುವುದು ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಘೋಷಿತ ತುರ್ತು ಪರಿಸ್ಥಿತಿಯನ್ನು ಜಾರಿಗೊಳಿಸಿದ್ದು, ವಿರೋಧಿಗಳ ಧ್ವನಿ ಅಡಗಿಸಲಾಗುತ್ತಿದೆ. ಆದರೆ, ನಮ್ಮ ಪಕ್ಷವು (ಎಸ್‌ಪಿ) ಬಿಜೆಪಿಯ ಜನವಿರೋಧಿ ನೀತಿಗಳನ್ನು ವಿರೋಧಿಸುವುದನ್ನು ಮುಂದುವರಿಸುತ್ತದೆ’ ಎಂದು ಎಸ್‌ಪಿ ವಕ್ತಾರ ಫಕ್ರುಲ್ ಹಸನ್ ಚಾಂದ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.