ADVERTISEMENT

ಉತ್ತರ ಪ್ರದೇಶ ಚುನಾವಣೆಯಲ್ಲಿ ಸಮಾಜವಾದಿ ಪಕ್ಷಕ್ಕೆ ಸ್ಪಷ್ಟ ಬಹುಮತ: ಮುಲಾಯಂ ಸಿಂಗ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಫೆಬ್ರುವರಿ 2022, 4:13 IST
Last Updated 20 ಫೆಬ್ರುವರಿ 2022, 4:13 IST
ಮುಲಾಯಂ ಸಿಂಗ್ ಯಾದವ್
ಮುಲಾಯಂ ಸಿಂಗ್ ಯಾದವ್   

ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಮಾಜಿ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೈಫೈ ಕ್ಷೇತ್ರದಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣೆಯಲ್ಲಿ ಸಮಾಜವಾದಿ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗಲಿದ್ದು, ಪಕ್ಷ ಅಧಿಕಾರಕ್ಕೆ ಬರುವುದು ಖಚಿತ’ ಎಂದಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು (ಭಾನುವಾರ) ಆರಂಭಗೊಂಡಿದೆ. 59 ಕ್ಷೇತ್ರಗಳಲ್ಲಿ 627 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ.

ADVERTISEMENT

403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ 7 ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಎರಡು ಹಂತದ (ಫೆಬ್ರುವರಿ 10 ಮತ್ತು 14ರಂದು) ಮತದಾನ ಈಗಾಗಲೇ ಮುಗಿದಿದೆ. ಫೆಬ್ರುವರಿ 23, 27, ಮಾರ್ಚ್‌ 3 ಮತ್ತು 7ರಂದು ಉಳಿದ ಹಂತಗಳ ಮತದಾನ ನಡೆಯಲಿದೆ. ಮಾರ್ಚ್‌ 10 ರಂದು ಫಲಿತಾಂಶ ಪ್ರಕಟವಾಗಲಿದೆ.

ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸ್ಪರ್ಧಿಸಿರುವ ಕರ್ಹಾಲ್‌ ಕ್ಷೇತ್ರದ ಮತದಾನವೂ ಇಂದೇ ನಡೆಯಲಿದೆ. ಈ ಕ್ಷೇತ್ರದಿಂದ ಕೇಂದ್ರ ಸಚಿವ ಎಸ್‌.ಪಿ. ಸಿಂಗ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಎಸ್‌ಪಿ ಸ್ಥಾಪಕ ಮುಲಾಯಂ ಸಿಂಗ್ ಅವರು ಮಗನ ಪರವಾಗಿ ಮತಯಾಚಿಸಿದ್ದರು. ಅಖಿಲೇಶ್ ಚಿಕ್ಕಪ್ಪ ಶಿವಪಾಲ್‌ ಯಾದವ್ ಅವರ ಭವಿಷ್ಯವೂ ನಿರ್ಧಾರವಾಗಲಿದೆ.

2017ರ ಚುನಾವಣೆಯಲ್ಲಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಎಸ್‌ಪಿ 47, ಬಿಎಸ್‌ಪಿ 19 ಕ್ಷೇತ್ರಗಳಲ್ಲಿ ಜಯ ಕಂಡರೆ, ಕಾಂಗ್ರೆಸ್ ಕೇವಲ 7 ಕಡೆ ಖಾತೆ ತೆರೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.