ಉತ್ತರಪ್ರದೇಶ ಸಂಭಲ್ ನಗರದ ಶಾಹಿ ಜಾಮಾ ಮಸೀದಿ ಸುತ್ತಲೂ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದರು
–ಪಿಟಿಐ ಚಿತ್ರ
ಸಂಭಲ್ (ಉತ್ತರ ಪ್ರದೇಶ)/ನವದೆಹಲಿ: ಕಳೆದ ವರ್ಷದ ನವೆಂಬರ್‌ನಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ಸಮಾಜವಾದಿ ಪಕ್ಷದ ಸಂಸದ ಜಿಯಾವುರ್ ರೆಹಮಾನ್ ಬಾರ್ಕ್ ಅವರಿಗೆ ನೋಟಿಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಬಾರ್ಕ್, ‘ನನಗೆ ಎಸ್‌ಐಟಿ ಅಧಿಕಾರಿಗಳು ನೋಟಿಸ್ ನೀಡಿರುವುದು ನಿಜ. ಏಪ್ರಿಲ್ 8ರಂದು ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ನಾನು ವಿಚಾರಣೆಗೆ ಹಾಜರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ’ ಎಂದು ಹೇಳಿದ್ದಾರೆ.
ಸಂಭಲ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ನನ್ನ ವಿರುದ್ಧ ಕೇಳಿಬಂದಿರುವ ಆರೋಪಗಳು ಆಧಾರರಹಿತವಾಗಿದೆ. ನನಗೆ ಕಾನೂನು, ಸಂವಿಧಾನ ಮತ್ತು ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆ ಇದೆ ಎಂದು ಅವರು ತಿಳಿಸಿದ್ದಾರೆ.
ಸಂಭಲ್‌ನಲ್ಲಿರುವ ಬಾರ್ಕ್ ಅವರ ಮನೆಯಲ್ಲಿ ಯಾರೂ ಇಲ್ಲದ ಕಾರಣಕ್ಕೆ ದೆಹಲಿಗೆ ತೆರಳಿ ನೋಟಿಸ್ ನೀಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಕುಮಾರ್ ಬಿಷ್ಣೋಯ್ ಹೇಳಿದ್ದಾರೆ.
ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಭಲ್‌ನ ಶಾಹಿ ಜಾಮಾ ಮಸೀದಿ ಸಮಿತಿಯ ಅಧ್ಯಕ್ಷ ಜಾಫರ್ ಅಲಿ ಅವರನ್ನು ಮಾರ್ಚ್ 23ರಂದು ಪೊಲೀಸರು ಬಂಧಿಸಿದ್ದರು.
ಕಳೆದ ವರ್ಷ ನ.24ರಂದು ಶಾಹಿ ಜಾಮಾ ಮಸೀದಿ ಸಮೀಕ್ಷೆ ವೇಳೆ ನಡೆದ ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟು ಅನೇಕರು ಗಾಯಗೊಂಡಿದ್ದರು. ಈ ಬಗ್ಗೆ ತನಿಖೆ ನಡೆಸಲು ಉತ್ತರ ಪ್ರದೇಶ ಸರ್ಕಾರವು ಡಿ.11ರಂದು ಮೂವರು ಸದಸ್ಯರನ್ನೊಳಗೊಂಡ ನ್ಯಾಯಾಂಗ ಆಯೋಗವನ್ನು ರಚಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.