ಉದಯನಿಧಿ ಸ್ಟಾಲಿನ್
ನವದೆಹಲಿ: ‘ಸನಾತನ ಧರ್ಮ ಒಂದು ಸಾಂಕ್ರಾಮಿಕ ರೋಗವಾಗಿದ್ದು, ಅದನ್ನು ಬುಡಸಮೇತ ಕಿತ್ತು ಹಾಕಬೇಕು’ ಎಂಬ ಹೇಳಿಕೆ ನೀಡಿದ್ದ ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
2023ರ ಸೆಪ್ಟೆಂಬರ್‌ನಲ್ಲಿ ಉದಯನಿಧಿ ನೀಡಿದ್ದ ಈ ಹೇಳಿಕೆ ಖಂಡಿಸಿ ಹಾಗೂ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು.
ನ್ಯಾ. ಬೆಲಾ ಎಂ. ತ್ರಿವೇದಿ ಹಾಗೂ ನ್ಯಾ. ಪ್ರಸನ್ನ ಬಿ. ವರಾಳೆ ಅವರಿದ್ದ ಪೀಠವು ಅರ್ಜಿಯನ್ನು ಪುರಸ್ಕರಿಸಲು ನಿರಾಕರಿಸಿತು. ಸಂವಿಧಾನದ 32ನೇ ವಿಧಿಯಡಿ ರಿಟ್ ಅರ್ಜಿಯನ್ನು ಹೇಗೆ ಪುರಸ್ಕರಿಸಲು ಸಾಧ್ಯ ಎಂದು ಪೀಠ ಪ್ರಶ್ನಿಸಿತು ಎಂದು ವರದಿಯಾಗಿದೆ.
‘ಚೆನ್ನೈನ ತೆಯನಂಪೇಟೆಯಲ್ಲಿ 2023ರ ಸೆಪ್ಟೆಂಬರ್ 3ರಂದು ನಡೆದಿದ್ದ, ‘ಸನಾತನ ಧರ್ಮ ನಿರ್ಮೂಲನಾ ಸಮಾವೇಶ’ದಲ್ಲಿ ಭಾಗವಹಿಸಿದ್ದ ಸಚಿವ ಉದಯನಿಧಿ ಸ್ಟಾಲಿನ್, ‘ಸನಾತನ ಧರ್ಮ ಒಂದು ಸಾಂಕ್ರಾಮಿಕ ರೋಗವಾಗಿದ್ದು, ಅದನ್ನು ಬುಡಸಮೇತ ಕಿತ್ತು ಹಾಕಬೇಕು’ ಎಂದು ಹೇಳಿದ್ದರು.
ಈ ಕಾರ್ಯಕ್ರಮವನ್ನು ತಮಿಳುನಾಡು ಪ್ರಗತಿಪರ ಲೇಖಕರು ಮತ್ತು ಕಲಾವಿದರ ಸಂಘ ಆಯೋಜಿಸಿತ್ತು. ಸಚಿವರ ಹೇಳಿಕೆಯನ್ನು ಆಕ್ಷೇಪಿಸಿದ್ದ ನಗರದ ಬೆಳತ್ತೂರು ಕಾಲೋನಿಯ ವಿ. ಪರಮೇಶ್, ‘ಈ ಹೇಳಿಕೆಯು ಸಮಾಜದಲ್ಲಿ ಅಶಾಂತಿ, ದಂಗೆ ಎಬ್ಬಿಸಲು ಪ್ರಚೋದನೆ ನೀಡುವಂತಿದೆ. ಇದರಿಂದ ನನ್ನ ಧಾರ್ಮಿಕ ಭಾವನೆಗೆ ದಕ್ಕೆಯುಂಟಾಗಿದೆ’ ಎಂದು ಆರೋಪಿಸಿ ಖಾಸಗಿ ದೂರು ಸಲ್ಲಿಸಿದ್ದರು.
ದೂರಿನ ಅನುಸಾರ ಭಾರತೀಯ ದಂಡ ಸಂಹಿತೆ–1860ರ ಕಲಂ 153, 298 ಮತ್ತು 500ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ವಿಚಾರಣಾ ನ್ಯಾಯಾಲಯ ಸಚಿವ ಉದಯನಿಧಿ ಸ್ಟಾಲಿನ್ ಹಾಗೂ ಅರ್ಜಿದಾರರಿಗೆ ಸಮನ್ಸ್ ಜಾರಿಗೊಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.