ರಾಹುಲ್ ಗಾಂಧಿ
ಪಿಟಿಐ ಚಿತ್ರ
ಮುಂಬೈ: ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ವೈದ್ಯೆಯ ಕುಟುಂಬ ಸದಸ್ಯರೊಂದಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಮಾತುಕತೆ ನಡೆಸಿದ್ದಾರೆ.
ದೂರವಾಣಿ ಮೂಲಕ ಸಂತ್ರಸ್ತೆಯ ಕುಟುಂಬದವರೊಂದಿಗೆ ಮಾತುಕತೆ ನಡೆಸಿದ ರಾಹುಲ್ ನ್ಯಾಯಕ್ಕಾಗಿ ನಿಮ್ಮ ಪರವಾಗಿ ನಿಲ್ಲುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಈ ವೇಳೆ ಸಂತ್ರಸ್ತೆಯ ತಾಯಿ ಮಾತನಾಡಿ, ನಮ್ಮ ಮಗಳಿಗೆ ಆದ ಘೋರ ಅನ್ಯಾಯದ ವಿರುದ್ಧ ಧ್ವನಿಗೂಡಿಸುವಂತೆ, ಆರೋಪಿಗಳಿಗೆ ಶಿಕ್ಷೆಯಾಗುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ರಾಹುಲ್ ಅವರನ್ನು ಒತ್ತಾಯಿಸಿದ್ದಾರೆ.
ಈ ಪ್ರಕರಣದಲ್ಲಿ ನಮ್ಮ ಮಗಳ ಸಾವಿಗೆ ನ್ಯಾಯ ಸಿಗಬೇಕೆಂದರೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಸರ್ಕಾರಕ್ಕೆ ತಿಳಿಸಿ ಎಂದೂ ಕುಟುಂಬಸ್ಥರು ರಾಹುಲ್ ಬಳಿ ಮನವಿ ಮಾಡಿದ್ದಾರೆ. ಈ ವೇಳೆ ಎಸ್‌ಐಟಿ ರಚನೆಗೆ ಸಂಬಂಧಿಸಿದಂತೆ ಸರ್ಕಾರ ಮೇಲೆ ಒತ್ತಡ ಹೇರುವುದಾಗಿ ಭರವಸೆ ನೀಡಿದ್ದಾರೆ.
ಈ ಕೃತ್ಯದಲ್ಲಿ ಭಾಗಿಯಾಗಿದ್ದರೆ ಎಂದು ಆರೋಪಿಸಲಾದ ವ್ಯಕ್ತಿಗಳ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ. ಘಟನೆ ನಡೆದು ಒಂದು ವಾರ ಕಳೆದಿದೆ. ಸಾಕ್ಷ್ಯಗಳು ನಾಶವಾಗುವ ಸಾಧ್ಯತೆ ಇದೆ ಎಂದು ಸಂತ್ರಸ್ತೆಯ ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಸಂತ್ರಸ್ತೆಯ ಚಿಕ್ಕಪ್ಪ, ನಮ್ಮ ಮಗಳು ಮೃತಪಟ್ಟ ಬಳಿಕ ಆಕೆಯ ಬೆರಳಚ್ಚು ಸಹಾಯದಿಂದಾಗಿ ಮೊಬೈಲ್ ಫೋನ್‌ನಲ್ಲಿರುವ ಎಲ್ಲಾ ಡೇಟಾವನ್ನು ಅಳಿಸಿ ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.
ಸತಾರಾ ಜಿಲ್ಲೆಯ ಸರ್ಕಾರಿ ವೈದ್ಯೆಯ ಆತ್ಮಹತ್ಯೆ ಪ್ರಕರಣದಲ್ಲಿ ರಾಜಕಾರಣಿಯೊಬ್ಬರ ಹೆಸರು ಕೇಳಿಬರುತ್ತಿದ್ದಂತೆ ಪೊಲೀಸರು ಕಾರ್ಯಪ್ರವರ್ತರಾಗಿದ್ದು, ಪುಣೆ ಮೂಲದ ಟೆಕಿಯನ್ನು ಬಂಧಿಸಿದ್ದಾರೆ.
ಸತಾರಾ ಜಿಲ್ಲೆಯ ಫಲ್ಟಣ್ ಉಪ ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 28 ವರ್ಷದ ವೈದ್ಯೆಯು ಪಟ್ಟಣದ ಹೋಟೆಲ್‌ನ ಕೊಠಡಿಯೊಂದರಲ್ಲಿ ಗುರುವಾರ ನೇಣು ಹಾಕಿಕೊಂಡು, ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವೇಳೆ ಅವರು ಅಂಗೈನಲ್ಲಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ ಪೊಲೀಸ್ ಸಬ್ ಇನ್‌ಸ್ಪೆಪೆಕ್ಟರ್ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಹೆಸರುಗಳನ್ನು ಬರೆದಿಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.