ADVERTISEMENT

ಮಾಹಿತಿ ಆಯೋಗಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಸುಪ್ರೀಂ ಕೋರ್ಟ್ ಸೂಚನೆ

ಪಿಟಿಐ
Published 30 ಅಕ್ಟೋಬರ್ 2023, 14:39 IST
Last Updated 30 ಅಕ್ಟೋಬರ್ 2023, 14:39 IST
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್   

ನವದೆಹಲಿ: ಕೇಂದ್ರ ಮಾಹಿತಿ ಆಯೋಗ ಮತ್ತು ರಾಜ್ಯ ಮಾಹಿತಿ ಆಯೋಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡದಿದ್ದರೆ 2005ರ ಮಾಹಿತಿ ಹಕ್ಕು ಕಾನೂನು ಇದ್ದೂ, ಇಲ್ಲದಂತಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದೆ. 

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ಪೀಠವು, ಆಯೋಗದಲ್ಲಿ ಮಂಜೂರಾಗಿರುವ ಹುದ್ದೆಗಳು, ಖಾಲಿ ಇರುವ ಹುದ್ದೆಗಳು ಮತ್ತು ಇತ್ಯರ್ಥವಾಗಬೇಕಿರುವ ಒಟ್ಟು ಪ್ರಕರಣಗಳು ಸೇರಿದಂತೆ ಇನ್ನಿತರ ಮಾಹಿತಿಗಳನ್ನು ಎಲ್ಲ ರಾಜ್ಯಗಳಿಂದ ಪಡೆಯುವಂತೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ಸೂಚಿಸಿದೆ. 

ಈ ಎಲ್ಲ ಮಾಹಿತಿಗಳನ್ನು ಸಂಗ್ರಹಿಸಿ ಸಲ್ಲಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮೂರು ವಾರ ಕಾಲಾವಕಾಶ ನೀಡಲಾಗಿದೆ. 

ADVERTISEMENT

ಕೇಂದ್ರ ಮಾಹಿತಿ ಆಯೋಗ ಮತ್ತು ರಾಜ್ಯ ಮಾಹಿತಿ ಆಯೋಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕಾಲ–ಕಾಲಕ್ಕೆ ಭರ್ತಿ ಮಾಡಬೇಕು ಎಂದು 2019ರಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಆದರೆ, ಈ ತೀರ್ಪನ್ನು ಯಾವುದೇ ರಾಜ್ಯ ಅಥವಾ ಕೇಂದ್ರ ಸರ್ಕಾರ ಪಾಲನೆ ಮಾಡುತ್ತಿಲ್ಲ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತೆ ಅಂಜಲಿ ಭಾರದ್ವಜ್ ಸುಪ್ರೀಂ ಮೆಟ್ಟಿಲೇರಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.