ADVERTISEMENT

ಶಾಲೆಗಳಲ್ಲಿ ಮುಟ್ಟಿನ ನೈರ್ಮಲ್ಯ ನಿರ್ವಹಣೆ: ರಾಷ್ಟ್ರೀಯ ನೀತಿ ಸಿದ್ಧಪಡಿಸಲು ಸೂಚನೆ

ಪಿಟಿಐ
Published 10 ಏಪ್ರಿಲ್ 2023, 15:52 IST
Last Updated 10 ಏಪ್ರಿಲ್ 2023, 15:52 IST
.
.   

ನವದೆಹಲಿ (ಪಿಟಿಐ): ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಮುಟ್ಟಿನ ನೈರ್ಮಲ್ಯ ನಿರ್ವಹಣೆಗಾಗಿ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಅನುಷ್ಠಾನಗೊಳಿಸಬಹುದಾದ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್‌ಒಪಿ) ಮತ್ತು ರಾಷ್ಟ್ರೀಯ ಮಾದರಿಯೊಂದನ್ನು ಸಿದ್ಧಪಡಿಸುವಂತೆ ಸುಪ್ರೀಂ ಕೋರ್ಟ್‌ ಸೋಮವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಇದನ್ನು ‘ಅತ್ಯಂತ ಮಹತ್ವದ’ ವಿಷಯ ಎಂದು ಪರಿಗಣಿಸಿರುವ ಸುಪ್ರೀಂ ಕೋರ್ಟ್‌, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಏಕರೂಪದ ರಾಷ್ಟ್ರೀಯ ನೀತಿ ಜಾರಿಗೆ ಕೇಂದ್ರ ಸರ್ಕಾರವು ಎಲ್ಲಾ ಇಲಾಖೆ ಮತ್ತು ಸಂಘಸಂಸ್ಥೆಗಳೊಂದಿಗೆ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದೆ.

ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಮತ್ತು ಜೆ.ಬಿ.ಪಾರ್ದಿವಾಲ ಅವರನ್ನು ಒಳಗೊಂಡ ನ್ಯಾಯಪೀಠವು, ರಾಷ್ಟ್ರೀಯ ನೀತಿ ನಿರೂಪಣೆಗೆ ಸಂಬಂಧಿತ ದತ್ತಾಂಶ ಸಂಗ್ರಹಣೆ ಮತ್ತು ರಾಜ್ಯಗಳೊಂದಿಗೆ ಸಮನ್ವಯ ಸಾಧಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿಯನ್ನು ನೋಡಲ್‌ ಅಧಿಕಾರಿಯಾಗಿ ನೇಮಿಸಿದೆ.

ADVERTISEMENT

ಇದೇ ವೇಳೆ ಈಗಾಗಲೇ ಮುಟ್ಟಿನ ನೈರ್ಮಲ್ಯಕ್ಕಾಗಿ ಜಾರಿಗೊಳಿಸಿರುವ ಯೋಜನೆಗಳ ಕುರಿತು ವರದಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.