ADVERTISEMENT

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಹುದ್ದೆ: ಮತ್ತಿಬ್ಬರ ಹೆಸರು ಶಿಫಾರಸು

​ಪ್ರಜಾವಾಣಿ ವಾರ್ತೆ
Published 31 ಜನವರಿ 2023, 16:06 IST
Last Updated 31 ಜನವರಿ 2023, 16:06 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ಹುದ್ದೆಗೆ ಅಲಹಾಬಾದ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಾಜೇಶ್‌ ಬಿಂದಾಲ್‌ ಹಾಗೂ ಗುಜರಾತ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅರವಿಂದ ಕುಮಾರ್‌ ಅವರ ಹೆಸರು ಅಂತಿಮಗೊಳಿಸಲಾಗಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ಕೊಲಿಜಿಯಂ ಮಂಗಳವಾರ ಇವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಕಳೆದ ವರ್ಷದ ಡಿಸೆಂಬರ್‌ 13ರಂದು ಕೊಲಿಜಿಯಂ, ನ್ಯಾಯಮೂರ್ತಿಗಳ ಹುದ್ದೆಗೆ ಐವರ ಹೆಸರು ಶಿಫಾರಸು ಮಾಡಿತ್ತು. ಈ ಕುರಿತು ಕೇಂದ್ರ ಸರ್ಕಾರ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.

ನ್ಯಾಯಮೂರ್ತಿ ಬಿಂದಾಲ್‌ ಅವರ ಹೆಸರು ಶಿಫಾರಸು ಮಾಡುವ ನಿರ್ಣಯವನ್ನು ಕೊಲಿಜಿಯಂ ಸರ್ವಾನುಮತದಿಂದ ಅಂಗೀಕರಿಸಿತು. ಬಿಂದಾಲ್‌ ಅವರು ಹೈಕೋರ್ಟ್‌ ನ್ಯಾಯಮೂರ್ತಿಗಳ ಸೇವಾ ಹಿರಿತನದ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರು.

ADVERTISEMENT

ಈ ಹಿಂದೆ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಕೆಲಸ ಮಾಡಿದ್ದ ಅರವಿಂದ ಕುಮಾರ್‌ ಅವರ ಹೆಸರು ಪ್ರಸ್ತಾಪವಾದಾಗ ಕೊಲಿಜಿಯಂ ಸದಸ್ಯರಲ್ಲಿ ಒಬ್ಬರಾದ ನ್ಯಾಯಮೂರ್ತಿ ಕೆ.ಎಂ.ಜೋಸೆಫ್‌ ಅವರು ಅರವಿಂದ ಅವರ ಹೆಸರನ್ನು ಮುಂದಿನ ದಿನಗಳಲ್ಲಿ ಪರಿಗಣಿಸಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

‘ಅರ್ಹತೆ, ಕರ್ತವ್ಯ ನಿಷ್ಠೆ, ದಕ್ಷತೆಯ ಆಧಾರದಲ್ಲಿ ಇಬ್ಬರ ಹೆಸರು ಅಂತಿಮಗೊಳಿಸಲಾಗಿದೆ. ನ್ಯಾಯಮೂರ್ತಿಯಾಗಲು ಅಗತ್ಯವಿರುವ ಎಲ್ಲಾ ಅರ್ಹತೆಗಳನ್ನೂ ಇವರು ಹೊಂದಿದ್ದಾರೆ’ ಎಂದು ನ್ಯಾಯಮೂರ್ತಿಗಳಾದ ಸಂಜಯ್‌ ಕಿಶನ್‌ ಕೌಲ್‌, ಎಂ.ಆರ್‌.ಶಾ, ಅಜಯ್‌ ರಸ್ತೋಗಿ ಮತ್ತು ಸಂಜೀವ್‌ ಖನ್ನಾ ಅವರಿದ್ದ ಕೊಲಿಜಿಯಂ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.