ಉತ್ತರಪ್ರದೇಶ ಸಂಭಲ್ ನಗರದ ಶಾಹಿ ಜಾಮಾ ಮಸೀದಿ ಸುತ್ತಲೂ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದರು.
–ಪಿಟಿಐ ಚಿತ್ರ
ನವದೆಹಲಿ: ಉತ್ತರ ಪ್ರದೇಶದ ಸಂಭಲ್ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳಲು ತಾನು ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್ ಎರಡು ವಾರಗಳವರೆಗೆ ವಿಸ್ತರಿಸಿದೆ.
ಮಸೀದಿ ಸಮಿತಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಈ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಮೇಲ್ಮನವಿಗಳನ್ನು ಸಲ್ಲಿಸಿದ್ದಾರೆ ಎಂದು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ಅವರ ಪೀಠವು ತಿಳಿಸಿತು. ಈ ಬಗ್ಗೆ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಪೀಠ ತನ್ನ ರಿಜಿಸ್ಟ್ರಿಗೆ ಸೋಮವಾರ ಸೂಚಿಸಿದೆ.
ಹಿಂದೂ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ವಿಷ್ಣು ಶಂಕರ್ ಜೈನ್, ಯಥಾಸ್ಥಿತಿ ಕಾಯ್ದುಕೊಳ್ಳುವುದನ್ನು ಇನ್ನಷ್ಟು ವಿಸ್ತರಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದರು. ಮಸೀದಿ ಸಮಿತಿಯನ್ನು ಪ್ರತಿನಿಧಿಸುತ್ತಿರುವ ಹಿರಿಯ ವಕೀಲ ಹುಝೈಫ ಅಹ್ಮದಿ ಅವರು ವರದಿ ಸಲ್ಲಿಕೆ ತನಕ ಯಥಾಸ್ಥಿತಿಯನ್ನು ವಿಸ್ತರಿಸಬೇಕು ಎಂದು ಕೋರಿದರು.
ಅಲಹಾಬಾದ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಮಸೀದಿ ಸಮಿತಿ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ. ಶಾಹಿ ಜಾಮಾ ಮಸೀದಿ ಮತ್ತು ಹರಿಹರ ದೇವಾಲಯ ವಿವಾದಕ್ಕೆ ಸಂಬಂಧಿಸಿದಂತೆ ಮಸೀದಿ ಆವರಣದಲ್ಲಿ ಸಮೀಕ್ಷೆ ಕೈಗೊಳ್ಳುವಂತೆ ಸಿವಿಲ್ ನ್ಯಾಯಾಲಯ ನಿರ್ದೇಶಿಸಿತ್ತು. ಸಮೀಕ್ಷೆಯನ್ನು ಪ್ರಶ್ನಿಸಿ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.