ADVERTISEMENT

ಚುನಾವಣಾ ಕಾನೂನು ಉಲ್ಲಂಘನೆ ಆರೋಪ:ಕೇಜ್ರಿವಾಲ್‌ ವಿರುದ್ಧ ಮಧ್ಯಂತರ ತಡೆ ವಿಸ್ತರಣೆ

ಪಿಟಿಐ
Published 27 ಮಾರ್ಚ್ 2023, 11:33 IST
Last Updated 27 ಮಾರ್ಚ್ 2023, 11:33 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ (ಪಿಟಿಐ): ಉತ್ತರ ಪ್ರದೇಶದಲ್ಲಿ 2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ವಿರುದ್ಧದ ವಿಚಾರಣೆಗೆ ನೀಡಲಾಗಿದ್ದ ಮಧ್ಯಂತರ ತಡೆಯನ್ನು ಸುಪ್ರೀಂಕೋರ್ಟ್‌ ಸೋಮವಾರ ಮುಂದುವರಿಸಿದೆ.

ಈ ಕುರಿತು ಸುಲ್ತಾನ್‌ಪುರದ ವಿಚಾರಣಾ ನ್ಯಾಯಾಲಯದಲ್ಲಿ ಬಾಕಿ ಇರುವ ಕ್ರಿಮಿನಲ್‌ ಮೊಕದ್ದಮೆಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಕೋರಿ ಕೇಜ್ರಿವಾಲ್‌ ಅಲಹಾಬಾದ್‌ ಹೈಕೋರ್ಟ್‌ನ ಲಖನೌ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್‌ ಪೀಠವು ಕೇಜ್ರಿವಾಲ್‌ ಮನವಿಯನ್ನು ಕಳೆದ ತಿಂಗಳು ನಿರಾಕರಿಸಿತ್ತು. ಅದನ್ನು ಪ್ರಶ್ನಿಸಿ ಕೇಜ್ರಿವಾಲ್‌ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಎಫ್‌ಐಆರ್‌ ಪ್ರಕಾರ, ಚುನಾವಣಾ ಸಂದರ್ಭದಲ್ಲಿ ಕೇಜ್ರಿವಾಲ್‌ ವರ್ಗಗಳ ನಡುವೆ ದ್ವೇಷ ಭಾವನೆ ಮೂಡಿಸುತ್ತಿದ್ದಾರೆ ಎಂಬ ಆರೋಪ ಹೊರಿಸಲಾಗಿದ್ದು, 1951ರ ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್‌ 125ರ ಅಡಿ ಅಪರಾಧ ಪ್ರಕರಣ ದಾಖಲಿಸಲಾಗಿದೆ.

ADVERTISEMENT

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್‌ ಮತ್ತು ಬಿ.ವಿ.ನಾಗರತ್ನ ಅವರನ್ನು ಒಳಗೊಂಡ ಪೀಠ ವಿಚಾರಣೆ ನಡೆಸಿತು. ಪ್ರತಿವಾದಿಗಳ ಪರವಾಗಿ ನ್ಯಾಯಾಲಯಕ್ಕೆ ಯಾರೂ ಹಾಜರಾಗದ ಕಾರಣ, ಪೀಠವು ಮೇ ಮೊದಲ ವಾರಕ್ಕೆ ವಿಚಾರಣೆಯನ್ನು ಮುಂದೂಡಿತು. ಅಲ್ಲದೆ ಮಧ್ಯಂತರ ಆದೇಶವನ್ನು ಮುಂದುವರಿಸಿತು. ಕೇಜ್ರಿವಾಲ್‌ ಪರ ಹಿರಿಯ ವಕೀಲ ಎ.ಎಂ.ಸಿಂಘ್ವಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.