ಸುಪ್ರೀಂ ಕೋರ್ಟ್
ನವದೆಹಲಿ: ವಂಚನೆ ಪ್ರಕರಣದ ಆರೋಪಿ ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆಯನ್ನು 27 ಬಾರಿ ಮುಂದೂಡಿದ ಅಲಹಾಬಾದ್ ಹೈಕೋರ್ಟ್ ಕ್ರಮಕ್ಕೆ ಸುಪ್ರೀಂ ಕೋರ್ಟ್ ಗುರುವಾರ ಅಸಮಾಧಾನ ವ್ಯಕ್ತಪಡಿಸಿದೆ. ಆರೋಪಿಗೆ ಜಾಮೀನು ಮಂಜೂರು ಮಾಡಿದೆ.
‘ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ 27 ಬಾರಿ ಮುಂದೂಡಿದ್ದು ಹೇಗೆ’ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸೀಹ್ ಅವರು ಇರುವ ವಿಭಾಗೀಯ ಪೀಠ ಪ್ರಶ್ನಿಸಿತು.
ಆರೋಪಿ ಲಕ್ಷ್ಯ ಎನ್ನುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪೀಠ ನಡೆಸಿತು. ಅವರ ವಿರುದ್ಧ ತನಿಖೆ ನಡೆಸುತ್ತಿರುವ ಸಿಬಿಐಗೆ ನೋಟಿಸ್ ಜಾರಿಗೆ ಪೀಠ ಆದೇಶಿಸಿದೆ.
ಪ್ರಕರಣದ ವಿಚಾರಣೆಯನ್ನು ಮುಂದೂಡಿದ್ದಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸಾಮಾನ್ಯವಾಗಿ ವಿಚಾರಣೆಗೆ ಎತ್ತಿಕೊಳ್ಳುವುದಿಲ್ಲ ಎಂದು ಪೀಠವು ಹೇಳಿದೆ. ಆದರೆ, ‘ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಷಯವನ್ನು ಹೈಕೋರ್ಟ್ ಬಾಕಿ ಇರಿಸಿಕೊಳ್ಳುವುದು, ಅದನ್ನು 27 ಬಾರಿ ಮುಂದೂಡುವುದು ಅಪೇಕ್ಷಣೀಯ ಅಲ್ಲ’ ಎಂದು ಸಿಜೆಐ ಹೇಳಿದರು.
ಲಕ್ಷ್ಯ ಅವರು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ಎದುರಿಸುತ್ತಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಅಡಿಯಲ್ಲಿಯೂ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.