ರಾಮ ಸೇತು
ನವದೆಹಲಿ: ರಾಮ ಸೇತುಗೆ ಸಂಬಂಧಿಸಿದಂತೆ ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿರುವ ಅರ್ಜಿಗೆ ಸುಪ್ರೀಂ ಕೋರ್ಟ್ ಕೇಂದ್ರದಿಂದ ಪ್ರತಿಕ್ರಿಯೆ ಕೇಳಿದೆ.
ರಾಮ ಸೇತುವನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ತನ್ನ ಪ್ರಾತಿನಿಧ್ಯವನ್ನು ತ್ವರಿತವಾಗಿ ನಿರ್ಧರಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸುಬ್ರಮಣಿಯನ್ ಸ್ವಾಮಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ತಮಿಳುನಾಡಿನ ಪಂಬನ್ ದ್ವೀಪದಿಂದ ಶ್ರೀಲಂಕಾದ ವಾಯವ್ಯ ಕರಾವಳಿಯ ಮನ್ನಾರ್ ದ್ವೀಪಕ್ಕೆ ಸಂಪರ್ಕಿಸುವ ಸುಣ್ಣದ ಕಲ್ಲಿನ ಸೇತುವೆಯೇ ರಾಮ ಸೇತು ಎನ್ನಲಾಗುತ್ತದೆ. ಇದಕ್ಕೆ ಆ್ಯಡಮ್‌ನ ಸೇತುವೆ ಎನ್ನುವ ಇನ್ನೊಂದು ಹೆಸರೂ ಇದೆ.
ನ್ಯಾಯಮೂರ್ತಿಗಳಾದ ವಿಕ್ರಂನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠ ಈ ಅರ್ಜಿಯ ವಿಚಾರಣೆಗೆ ಒಪ್ಪಿಗೆ ಸೂಚಿಸಿ, ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ 4 ವಾರಗಳ ಬಳಿಕ ವಿಚಾರಣೆಯನ್ನು ಮತ್ತೆ ನಡೆಸುವುದಾಗಿ ಹೇಳಿದೆ.
ರಾಮ ಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವಾಗಿ ಘೋಷಿಸುವ ವಿಷಯವನ್ನು ಪರಿಶೀಲಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ 2023ರ ಜ. 19ರಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.
ಈ ಸಂಬಂಧ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಸುಬ್ರಮಣಿಯನ್ ಸ್ವಾಮಿ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.