ADVERTISEMENT

ಮಕ್ಕಳ ಕಳ್ಳಸಾಗಣೆ ತಡೆಯಲು ಮಾರ್ಗಸೂಚಿಗೆ ಅರ್ಜಿ: ಕೇಂದ್ರಕ್ಕೆ ‘ಸುಪ್ರೀಂ’ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 8 ಜೂನ್ 2020, 14:09 IST
Last Updated 8 ಜೂನ್ 2020, 14:09 IST
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್   

ನವದೆಹಲಿ: ಮಕ್ಕಳ ಕಳ್ಳಸಾಗಣೆಯನ್ನು ತಡೆಯಲು ಮಾರ್ಗಸೂಚಿಗಳನ್ನು ರೂಪಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಸೋಮವಾರ ನೋಟಿಸ್‌ ನೀಡಿದೆ.

ಬಚ್‌ಪನ್‌‌ ಬಚಾವೊ ಆಂದೋಲನ ಎಂಬ ಎನ್‌ಜಿಒ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್)‌ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಿತು.

ಕೋವಿಡ್‌–19 ನಿಯಂತ್ರಿಸುವುದಕ್ಕಾಗಿ ಹೇರಿರುವ ಲಾಕ್‌ಡೌನ್‌ನ ಈ ಸಂದರ್ಭದಲ್ಲಿ ಮಕ್ಕಳ ಕಳ್ಳಸಾಗಣೆಯನ್ನೂ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಮಾರ್ಗಸೂಚಿಗಳನ್ನು ರೂಪಿಸಲು ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ADVERTISEMENT

ದೇಶದ ವಿವಿಧ ಭಾಗಗಳಲ್ಲಿ ಮಕ್ಕಳ ಕಳ್ಳಸಾಗಣೆದಾರರು ಸಕ್ರಿಯರಾಗಿದ್ದಾರೆ. ಬಾಲ ಕಾರ್ಮಿಕರಾಗುವಂತೆ ಮಾಡಲು ಮತ್ತು ಲೈಂಗಿಕ ಶೋಷಣೆಗಾಗಿ ತಮ್ಮ ಮಕ್ಕಳನ್ನು ಮಾರಾಟ ಮಾಡುವಂತೆ ಬಡ ಕುಟುಂಬಗಳನ್ನು ಒತ್ತಾಯಿಸುವುದು ಹಾಗೂ ಪ್ರೇರೇಪಿಸುವ ಕೆಲಸ ನಡೆದಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬಬೊಬ್ಡೆ ಹಾಗೂ ನ್ಯಾಯಮುರ್ತಿಗಳಾದ ಎಸ್‌.ಎ.ಬೋಪಣ್ಣ, ಹೃಷಿಕೇಶ್‌ ರಾಯ್‌ ಅವರಿದ್ದ ನ್ಯಾಯಪೀಠವು, ಅರ್ಜಿ ವಿಚಾರಣೆ ನಡೆಸಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ‍ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿತು.

ಮಕ್ಕಳ ಕಳ್ಳಸಾಗಣೆಯನ್ನು ತಡೆಗಟ್ಟಲುಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲುಅರ್ಜಿದಾರರ ಪರ ಹಿರಿಯ ವಕೀಲ ಎಚ್‌.ಎಸ್‌.ಫೂಲ್ಕಾ ಅವರೊಟ್ಟಿಗೆ ಕುಳಿತು ಸಲಹೆಗಳನ್ನು ಪಡೆಯಲಾಗುವುದು ಎಂದು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ತಿಳಿಸಿದರು.

ಎರಡು ವಾರಗಳ ನಂತರ ಈ ಅರ್ಜಿಯ ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.