ADVERTISEMENT

ರಾಘವೇಶ್ವರ ಸ್ವಾಮೀಜಿ ಪ್ರಕರಣ ಯಥಾಸ್ಥಿತಿ ಕಾಪಾಡಲು ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2020, 19:45 IST
Last Updated 24 ಫೆಬ್ರುವರಿ 2020, 19:45 IST

ನವದೆಹಲಿ: ‘ಮಠದ ಅಧಿಕಾರ ಹಾಗೂ ಹಣಕಾಸು ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀಗಳನ್ನು ಪೀಠಾಧಿಪತಿ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಕೋರಲಾದ ಮನವಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಯಥಾಸ್ಥಿತಿ ಕಾಪಾಡಿಕೊಂಡು ಹೋಗಬೇಕು’ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಈ ಕುರಿತಂತೆ 2019ರ ಜೂನ್ 27ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಘವೇಶ್ವರ ಭಾರತಿ ಸ್ವಾಮೀಜಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಯು.ಯು.ಲಲಿತ್‌ ಹಾಗೂ ನ್ಯಾಯಮೂರ್ತಿ ವಿನೀತ್‌ ಸರಣ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

‘ಕರ್ನಾಟಕ ಹೈಕೋರ್ಟ್ ಆದೇಶದ ಅನುಸಾರ ಅರ್ಜಿದಾರ ಎದುರ್ಕುಳ ಈಶ್ವರ ಭಟ್‌ ಸೇರಿದಂತೆ ಇತರರು ಸಲ್ಲಿಸಿರುವ ಮನವಿಗೆ ಸಂಬಂಧಿಸಿದಂತೆ ಮುಖ್ಯ ಕಾರ್ಯದರ್ಶಿ ಯಾವುದೇ ಕ್ರಮಕ್ಕೆ ಮುಂದಾಗಬಾರದು’ ಎಂದು ನ್ಯಾಯಪೀಠ ನಿರ್ದೇಶಿಸಿದೆ.

ADVERTISEMENT

ಸ್ವಾಮೀಜಿ ಪರವಾಗಿ ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತು ವಕೀಲರಾದ ಶೈಲೇಶ್ ಮಡಿಯಾಳ್, ಅರುಣಾ ಶ್ಯಾಮ್ ಈ ಮೇಲ್ಮನವಿ ಸಲ್ಲಿಸಿ ವಾದ ಮಂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.