
ನವದೆಹಲಿ: 30 ವಾರಗಳ ಗರ್ಭಿಣಿಯಾಗಿದ್ದ 14 ವರ್ಷ ವಯಸ್ಸಿನ ಅತ್ಯಾಚಾರ ಸಂತ್ರಸ್ತೆಗೆ ಗರ್ಭಪಾತ ಮಾಡಿಸಲು ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ.
ಬಾಲಕಿಗೆ ಗರ್ಭಪಾತ ಮಾಡಿಸಲು ಕೂಡಲೇ ವೈದ್ಯಕೀಯ ತಂಡವನ್ನು ನಿಯೋಜಿಸುವಂತೆ ಮುಂಬೈನ ಲೋಕಮಾನ್ಯ ತಿಲಕ್ ಪುರಸಭೆ ವೈದ್ಯಕೀಯ ಕಾಲೇಜು ಮತ್ತು ಸಾರ್ವಜನಿಕ ಆಸ್ಪತ್ರೆಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ನ್ಯಾಯಪೀಠವು ನಿರ್ದೇಶನ ನೀಡಿದೆ.
ಯಾವುದೇ ಪ್ರಕರಣದಲ್ಲಿ ಸಂಪೂರ್ಣ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಆದೇಶ ಹೊರಡಿಸಲು ಸಂವಿಧಾನದ 142ನೇ ವಿಧಿ ಅಡಿ ಸುಪ್ರೀಂ ಕೋರ್ಟ್‌ಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಈ ಅಧಿಕಾರವನ್ನು ಬಳಸಿಕೊಂಡು ನ್ಯಾಯಪೀಠ ಈ ಆದೇಶ ನೀಡಿದೆ. ವೈದ್ಯಕೀಯ ಗರ್ಭಪಾತ (ಎಂಟಿಪಿ) ಕಾಯ್ದೆಯ ಅನ್ವಯ 24 ವಾರಗಳ ಗರ್ಭಿಣಿಗೆ ಗರ್ಭಪಾತ ಮಾಡಿಸಲು ಅನುಮತಿ ಇದೆ.
ಗರ್ಭಪಾತಕ್ಕೆ ಅನುಮತಿ ಕೋರಿ ಬಾಲಕಿಯ ತಂದೆ ಸಲ್ಲಿಸಿದ್ದ ಅರ್ಜಿಯನ್ನು ನಿರಾಕರಿಸಿ ಬಾಂಬೆ ಹೈಕೋರ್ಟ್ ಈ ಹಿಂದೆ ಆದೇಶ ನೀಡಿತ್ತು. ಬಳಿಕ ಬಾಲಕಿಯ ತಂದೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ಈಗ ಆಕೆಗೆ ಗರ್ಭಪಾತ ಮಾಡಿಸಿದರೆ ಯಾವುದೇ ದೈಹಿಕ ಅಥವಾ ಮಾನಸಿಕ ಸಮಸ್ಯೆಯಾಗುವುದಿಲ್ಲವಷ್ಟೆ ಎನ್ನುವುದನ್ನು ಸ್ಪಷ್ಟಪಡಿಸಿಕೊಳ್ಳುವಂತೆ ಏಪ್ರಿಲ್ 19ರಂದು ಲೋಕಮಾನ್ಯ ತಿಲಕ್ ಆಸ್ಪತ್ರೆಗೆ ಸೂಚಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.