ADVERTISEMENT

ದೆಹಲಿ ಅಬಕಾರಿ ನೀತಿ ಹಗರಣ: ಕವಿತಾಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಪಿಟಿಐ
Published 22 ಮಾರ್ಚ್ 2024, 6:01 IST
Last Updated 22 ಮಾರ್ಚ್ 2024, 6:01 IST
<div class="paragraphs"><p>ಕೆ. ಕವಿತಾ</p></div>

ಕೆ. ಕವಿತಾ

   

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧಿತರಾಗಿರುವ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ಶುಕ್ರವಾರ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ, ಎಂ.ಎಂ.ಸುಂದ್ರೇಶ್‌, ಬೇಲಾ ಎಂ ತ್ರಿವೇದಿ ಅವರ ಪೀಠವು, ಜಾಮೀನಿಗೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯವನ್ನು ಸಂರ್ಪಕಿಸುವಂತೆ ತಿಳಿಸಿದೆ. ಜಾಮೀನು ಅರ್ಜಿಗಳಿಗೆ ಸಂಬಂಧಿಸಿದಂತೆ ಪಾಲನೆ ಆಗುತ್ತಿರುವ ಶಿಷ್ಟಾಚಾರವನ್ನು ಬೈಪಾಸ್‌ ಮಾಡಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ.

ADVERTISEMENT

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ನಿಬಂಧನೆಗಳನ್ನು ಪ್ರಶ್ನಿಸಿ ಕವಿತಾ ಅವರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಪೀಠವು ಇ.ಡಿಗೆ ನೋಟಿಸ್‌ ಜಾರಿ ಮಾಡಿದ್ದು, ಆರು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ತಿಳಿಸಿದೆ. ಈ ಕುರಿತ ಅರ್ಜಿಯು ಬಾಕಿ ಉಳಿದಿರುವ ಇತರ ಅರ್ಜಿಗಳೊಂದಿಗೆ ವಿಚಾರಣೆಗೆ ಬರಲಿದೆ ಎಂದು ಪೀಠವು ಕವಿತಾ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್‌ ಅವರಿಗೆ ಹೇಳಿದೆ.

ಜಾಮೀನಿಗೆ ಸಂಬಂಧಿಸಿದಂತೆ ಕವಿತಾ ಅವರು ಯಾವುದೇ ಅರ್ಜಿ ಸಲ್ಲಿಸಿದರೆ ಅದನ್ನು ತ್ವರಿತವಾಗಿ ಇತ್ಯರ್ಥಪಡಿಸುವಂತೆ ಪೀಠ ಆದೇಶಿಸಿತು. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಕವಿತಾ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ತೆಲಂಗಾಣದ ವಿಧಾನ ಪರಿಷತ್ತಿನ ಸದಸ್ಯೆ ಮತ್ತು ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್‌ ಅವರ ಪುತ್ರಿ ಕವಿತಾ ಅವರನ್ನು ಮಾರ್ಚ್‌ 15ರಂದು ಬಂಧಿಸಲಾಯಿತು. ಅವರನ್ನು ಇದೇ 23ರವರೆಗೆ ಇ.ಡಿ ವಶಕ್ಕೆ ನೀಡಲಾಗಿದೆ. 

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಎಂಎಂ ಸುಂದ್ರೇಶ್ ಮತ್ತು ಬೇಲಾ ಎಂ. ತ್ರಿವೇದಿ ಅವರಿದ್ದ ವಿಭಾಗೀಯ ಪೀಠವು ಕವಿತಾ ಅವರಿಗೆ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಸೂಚಿಸಿದೆ. ಇದು ಈ ನ್ಯಾಯಾಲಯವು ಅನುಸರಿಸುತ್ತಿರುವ ಕ್ರಮ. ಶಿಷ್ಟಾಚಾರ ಉಲ್ಲಂಘಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.