ADVERTISEMENT

ಬಲವಂತದ ಮತಾಂತರ: ಅರ್ಜಿ ತಿರಸ್ಕರಿಸಿದ ‘ಸುಪ್ರೀಂ’

ಮದ್ರಾಸ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ

ಪಿಟಿಐ
Published 25 ಮಾರ್ಚ್ 2022, 10:32 IST
Last Updated 25 ಮಾರ್ಚ್ 2022, 10:32 IST
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್   

ನವದೆಹಲಿ: ಹಿಂದೂಗಳನ್ನು ಬಲವಂತದಿಂದ ಮತಾಂತರಗೊಳಿಸಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಮದ್ರಾಸ್‌ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗಾಗಿ ಸ್ವೀಕರಿಸಲು ಸುಪ್ರೀಂಕೋರ್ಟ್‌ ಶುಕ್ರವಾರ ನಿರಾಕರಿಸಿತು.

ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಹಾಗೂ ಎ.ಎಸ್‌.ಬೋಪಣ್ಣ ಅವರಿದ್ದ ನ್ಯಾಯಪೀಠ, ‘ಸಾರ್ವಜನಿಕ ಹಿತಾಸಕ್ತಿಗಿಂತ ಪ್ರಚಾರ ಪಡೆಯುವ ಸಲುವಾಗಿ ಇಂತಹ ಅರ್ಜಿ ಸಲ್ಲಿಸಲಾಗಿದೆ. ಇಂಥ ಅರ್ಜಿಗಳನ್ನು ಸಲ್ಲಿಸುವ ಮೂಲಕ ಸೌಹಾರ್ದಕ್ಕೆ ಧಕ್ಕೆ ತರುತ್ತಿದ್ದೀರಿ’ ಎಂದು ಅರ್ಜಿದಾರರನ್ನು ಉದ್ದೇಶಿಸಿ ಹೇಳಿತು.

ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲ ಸಿ.ಆರ್‌.ಜಯಸುಕಿನ್, ಅರ್ಜಿಯನ್ನು ಹಿಂಪಡೆಯಲು ಅನುಮತಿ ನೀಡುವಂತೆ ಕೋರಿದರು.

ADVERTISEMENT

‘ಅರ್ಜಿದಾರರು ಸಲ್ಲಿಸಿರುವ ಈ ರಜಾಕಾಲದ ವಿಶೇಷ ಅರ್ಜಿಯನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಪರಿಗಣಿಸಿ, ಅರ್ಜಿಯನ್ನು ವಜಾಗೊಳಿಸಲಾಗಿದೆ’ ಎಂದು ನ್ಯಾಯಪೀಠ ಆದೇಶಿಸಿತು.

ಕ್ರೈಸ್ತ ಮಿಶನರಿಗಳ ಚಟುವಟಿಕೆಗಳ ಮೇಲೆ ಕಣ್ಗಾವಲಿಗೆ ಹಾಗೂ ಮೇಲ್ವಿಚಾರಣೆಗಾಗಿ ಮಂಡಳಿ ಸ್ಥಾಪಿಸಬೇಕು. ಇಂಥ ಕ್ರಮ ಕೈಗೊಳ್ಳಲು ಕೇಂದ್ರ ಹಾಗೂ ತಮಿಳುನಾಡು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಮದ್ರಾಸ್‌ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಈ ಸಂಬಂಧ ಕಳೆದ ವರ್ಷ ಮಾರ್ಚ್‌ನಲ್ಲಿ ಹೈಕೋರ್ಟ್‌ ಆದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.