ನವದೆಹಲಿ: ಚುನಾವಣಾ ಬಾಂಡ್ ಯೋಜನೆಗೆ ತಡೆ ವಿಧಿಸಬೇಕೆಂದು ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಎರಡು ವಾರದೊಳಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಆದರೆ ಯೋಜನೆಗೆ ಮಧ್ಯಂತರ ತಡೆ ವಿಧಿಸಲು ನಿರಾಕರಿಸಿದೆ.
ಮುಖ್ಯನ್ಯಾಯಮೂರ್ತಿ ಎಸ್.ಎ. ಬೊಬಡೆ, ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಹಾಗೂ ಸೂರ್ಯಕಾಂತ್ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿದ್ದು, ಎರಡು ವಾರಗಳ ಬಳಿಕ ಈ ಅರ್ಜಿ ವಿಚಾರಣೆ ನಡೆಸುವುದಾಗಿ ಹೇಳಿದೆ.
ದೆಹಲಿಯಲ್ಲಿ ಮುಂಬರುತ್ತಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ, 10 ದಿನಗಳ ಅವಧಿಗೆ ಚುನಾವಣಾ ಬಾಂಡ್‌ಗಳನ್ನು ಮಾರಾಟ ಮಾಡಲು ಸರ್ಕಾರ ಮುಂದಾಗಿದೆ.
ಈ ಯೋಜನೆಗೆ ತಡೆ ಹೇರುವಂತೆ ‘ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್’ ಎನ್ನುವ ಎನ್‌ಜಿಒ ಅರ್ಜಿ ಸಲ್ಲಿಸಿದೆ. ಎನ್‌ಜಿಒ ಪರ ವಾದ ಮಂಡಿಸಿದ ವಕೀಲ ಪ್ರಶಾಂತ್ ಭೂಷಣ್, ಕಪ್ಪು ಹಣವನ್ನು ಪರಿವರ್ತಿಸಲು ಈ ಮಾರ್ಗ ಅನುಸರಿಸಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ.
ಯೋಜನೆಯ ನಿಯಮದ ಅನುಸಾರ, ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಲು ಸಾರ್ವಜನಿಕರು ಈ ಚುನಾವಣಾ ಬಾಂಡ್‌ಗಳನ್ನು ಖರೀದಿಸಬಹುದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.