ADVERTISEMENT

ಮಹಾರಾಷ್ಟ್ರ ಸರ್ಕಾರ ವಜಾಕ್ಕೆ ಒತ್ತಾಯ: ಪಿಐಎಲ್‌ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಪಿಟಿಐ
Published 16 ಅಕ್ಟೋಬರ್ 2020, 11:10 IST
Last Updated 16 ಅಕ್ಟೋಬರ್ 2020, 11:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ ಅಘಾಡಿ ಸರ್ಕಾರವನ್ನು ವಿಸರ್ಜಿಸಿ, ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಶುಕ್ರವಾರ ಸುಪ್ರೀಂ ಕೋರ್ಟ್‌ ತಿರಸ್ಕರಿಸಿತು.

‘ಇಂಥ ಮನವಿಗಳನ್ನು ಪರಿಗಣಿಸುವುದಿಲ್ಲ‘ ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ಮತ್ತು ನ್ಯಾಯಮೂರ್ತಿ ಗಳಾದ ಎ.ಎಸ್‌.ಬೋಪಣ್ಣ ಮತ್ತು ವಿ.ರಾಮಸುಬ್ರಹ್ಮಣಿಯನ್ ಅವರನ್ನೊಳಗೊಂಡ ಪೀಠ ಹೇಳಿದೆ.

ವಿಡಿಯೊ ಕಾನ್ಫರೆನ್ಸ್‌ ಮೂಲಕ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ‘ಈ ವಿಚಾರದಲ್ಲಿ ನೀವು ಅರ್ಜಿದಾರರಾಗಿ ರಾಷ್ಟ್ರಪತಿ ಅವರನ್ನು ಭೇಟಿಯಾಗಲು ಸ್ವತಂತ್ರರಿದ್ದೀರಿ. ಆದರೆ, ನ್ಯಾಯಾಲಯಕ್ಕೆ ಇಂಥ ವಿಷಯವನ್ನು ತರಬೇಡಿ‘ ಎಂದು ಹೇಳಿದೆ.

ADVERTISEMENT

‘ಮಹಾರಾಷ್ಟ್ರದಲ್ಲಿ ಆಳ್ವಿಕೆ ನಡೆಸುತ್ತಿರುವ ಸರ್ಕಾರ ಸಾಂವಿಧಾನಿಕ ಹಾಗೂ ಕಾನೂನಾತ್ಮಕವಾಗಿ ಕಾರ್ಯನಿರ್ವಹಿಸುತ್ತಿಲ್ಲ‘ ಎಂದು ಆರೋಪಿಸಿ ವಿಕ್ರಮ್ ಗೆಹ್ಲೋಟ್‌ ಎಂಬುವರು ಸರ್ಕಾರವನ್ನು ವಜಾಗೊಳಿಸುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ದುರ್ಬಲವಾಗಿದೆ ಎಂಬುದಕ್ಕೆ ಉದಾಹರಣೆಯಾಗಿ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಮತ್ತು ಬಾಲಿವುಡ್ ನಟಿ ಕಂಗನಾ ರನೌತ್ ಅವರ ಕಚೇರಿಯನ್ನು ಕೆಡವಿದ ಪ್ರಕರಣಗಳನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.

ಅರ್ಜಿಯ ವಿಚಾರಣೆ ವೇಳೆ ನ್ಯಾಯಪೀಠ, ‘ಮಹಾರಾಷ್ಟ್ರ ಒಂದು ದೊಡ್ಡ ರಾಜ್ಯ. ಇಂಥ ಕೆಲವು ಘಟನೆಗಳಿಂದ ರಾಜ್ಯದಲ್ಲಿ ಕಾನೂನು ಪಾಲನೆಯಾಗುತ್ತಿಲ್ಲ ಎಂದು ಹೇಗೆ ಹೇಳುತ್ತೀರಿ‘ ಎಂದು ಅರ್ಜಿದಾರರನ್ನು ಪ್ರಶ್ನಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.