ADVERTISEMENT

ಮೋದಿ ಅವರ ಆಯ್ಕೆಯನ್ನು ಪ್ರಶ್ನಿಸಿದ ಅರ್ಜಿ: ತೀರ್ಪು ಕಾಯ್ದಿರಿಸಿದ ‘ಸುಪ್ರೀಂ’

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2020, 21:27 IST
Last Updated 18 ನವೆಂಬರ್ 2020, 21:27 IST
ತೇಜ್ ಬಹದ್ದೂರ್
ತೇಜ್ ಬಹದ್ದೂರ್   

ನವದೆಹಲಿ: ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಆಯ್ಕೆಯನ್ನು ಪ್ರಶ್ನಿಸಿ ಬಿಎಸ್‌ಎಫ್ ಮಾಜಿ ಯೋಧ ತೇಜ್ ಬಹದ್ದೂರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮುಂದೂಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಅರ್ಜಿಗೆ ಸಂಬಂಧಿಸಿದ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬಡೆ ಅವರಿದ್ದ ಪೀಠವು ಕಾಯ್ದಿರಿಸಿದೆ.

‘ಇದು ಅತ್ಯಂತ ಪ್ರಮುಖವಾದ ವಿಷಯ. ಪ್ರತಿವಾದಿಯು ದೇಶದ ಅತ್ಯುನ್ನತ ಹುದ್ದೆಯಲ್ಲಿ ಇರುವವರು. ಅವರು ಭಾರತದ ಪ್ರಧಾನಿ. ಈಗಾಗಲೇ ಹಲವು ಬಾರಿ ವಿಚಾರಣೆ ಮುಂದೂಡಲಾಗಿದೆ. ಮತ್ತೆ ಮುಂದೂಡಲು ಸಾಧ್ಯವಿಲ್ಲ’ ಎಂದು ಪೀಠವು ಹೇಳಿತು.

ಬಿಎಸ್‌ಎಫ್‌ನಿಂದ 2017ರಲ್ಲಿ ವಜಾ ಆಗಿದ್ದ ಯೋಧ ತೇಜ್ ಬಹದ್ದೂರ್ ಅವರು, 2019ರ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ ಸಲ್ಲಿಸಿದ್ದರು. ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಮತ್ತೊಂದು ನಾಮಪತ್ರ ಸಲ್ಲಿಸಿದ್ದರು. ‘ಬಿಎಸ್‌ಎಫ್‌ನಿಂದ ಭ್ರಷ್ಟಾಚಾರದ ಆರೋಪದಲ್ಲಿ ವಜಾ ಮಾಡಿಲ್ಲ’ ಎಂಬುದನ್ನು ದೃಢೀಕರಿಸುವ ಪ್ರಮಾಣಪತ್ರ ಸಲ್ಲಿಸಿಲ್ಲ ಎಂದು ಅವರ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು. ಇದರ ವಿರುದ್ಧ ಅವರು ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ADVERTISEMENT

ಚುನಾವಣಾ ಅಧಿಕಾರಿಯು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ನನ್ನ ನಾಮಪತ್ರ ತಿರಸ್ಕರಿಸಿದ್ದಾರೆ. ಪ್ರಮಾಣಪತ್ರ ಪಡೆದುಕೊಳ್ಳಲು ನನಗೆ ಅಗತ್ಯವಾದ ಸಮಯಾವಕಾಶ ನೀಡಿಲ್ಲ. ಹೀಗಾಗಿ ನರೇಂದ್ರ ಮೋದಿ ಅವರ ಆಯ್ಕೆಯನ್ನು ರದ್ದು ಮಾಡಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದರು.ಅವರ ಅರ್ಜಿಯನ್ನು ಹೈಕೋರ್ಟ್ ವಜಾ
ಮಾಡಿತ್ತು. ಅದರ ವಿರುದ್ಧ ತೇಜ್ ಬಹದ್ದೂರ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅಧಿಕಾರ ದುರುಪಯೋಗಕ್ಕೆ ಸಂಬಂಧಿಸಿದಂತೆ ಸಾಕ್ಷ್ಯವನ್ನು ಸಲ್ಲಿಸಿ ಎಂದು ಸುಪ್ರೀಂ ಕೋರ್ಟ್ ಅರ್ಜಿದಾರರಿಗೆ ಸೂಚಿಸಿತ್ತು. ಇದಕ್ಕೆ ಸಮಯಾವಕಾಶ ಬೇಕು ಎಂದು ಅರ್ಜಿದಾರರು ಕೋರಿದ್ದರು. ಹೀಗಾಗಿ 4 ಬಾರಿ ವಿಚಾರಣೆಯನ್ನು ಮುಂದೂಡಲಾಗಿತ್ತು. ಈಗಐದನೇ ಬಾರಿಯೂ ವಿಚಾರಣೆ ಮುಂದೂಡುವಂತೆ ಅರ್ಜಿದಾರರು ಕೋರಿದ್ದರು. ಇದನ್ನು ಪೀಠವು ತಿರಸ್ಕರಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.