ADVERTISEMENT

ಕೊರೊನಾ ಪರೀಕ್ಷೆಗೆ ಏಕರೂಪ ದರ ನಿಗದಿ: ಸರ್ಕಾರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ

ಪಿಟಿಐ
Published 24 ನವೆಂಬರ್ 2020, 9:22 IST
Last Updated 24 ನವೆಂಬರ್ 2020, 9:22 IST
ಆರ್‌ಟಿ–ಪಿಸಿಆರ್ ಪರೀಕ್ಷೆಗೆ ಗಂಟಲ ದ್ರವ ಮಾದರಿ ಸಂಗ್ರಹ (ಸಾಂದರ್ಭಿಕ ಚಿತ್ರ)
ಆರ್‌ಟಿ–ಪಿಸಿಆರ್ ಪರೀಕ್ಷೆಗೆ ಗಂಟಲ ದ್ರವ ಮಾದರಿ ಸಂಗ್ರಹ (ಸಾಂದರ್ಭಿಕ ಚಿತ್ರ)   

ನವದೆಹಲಿ: ‘ಕೋವಿಡ್‌ 19'ಸೋಂಕು ಪತ್ತೆಗಾಗಿ ನಡೆಸುವ ‘ಆರ್‌ಟಿ–ಪಿಸಿಆರ್‌‘ ಪರೀಕ್ಷೆಗೆ ದೇಶದಾದ್ಯಂತ ಏಕರೂಪದ ದರ ನಿಗದಿಪಡಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ(ಪಿಐಎಲ್‌) ಪ್ರತಿಕ್ರಿಯಿಸುವಂತೆ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರವನ್ನು ಕೇಳಿದೆ.

ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೊಪಣ್ಣ ಮತ್ತು ವಿ.ರಾಮ ಸುಬ್ರಮಣಿಯನ್ ಅವರನ್ನೊಳಗೊಂಡ ಪೀಠ ಈ ಕುರಿತು ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯಕ್ಕೆ ನೋಟಿಸ್ ನೀಡಿ, ವಿಚಾರಣೆಯನ್ನು ಎರಡು ವಾರಗಳ ಕಾಲ ಮಂದೂಡಿದೆ. ಏಕ ರೂಪ ದರ ನಿಗದಿಪಡಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ವಕೀಲ ಅಜಯ್ ಅಗರ್‌ವಾಲ್‌ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ದೆಹಲಿ ಸೇರಿದಂತೆ ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ₹900 ರಿಂದ ₹2800ವರೆಗೆ ದರ ನಿಗದಿಪಡಿಸಲಾಗಿದೆ. ಒಂದೊಂದು ರಾಜ್ಯದಲ್ಲಿ ಒಂದೊಂದು ದರವಿದೆ. ಇದರ ಬದಲಿಗೆ ದೇಶಾದ್ಯಂತ ಏಕರೂಪವಾಗಿ ₹400 ದರ ನಿಗದಿಪಡಿಸಬೇಕು. ಈ ಕುರಿತು ಸುಪ್ರೀಂ ಕೋರ್ಟ್‌ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ADVERTISEMENT

ಈ ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವ ಅಗತ್ಯವಿದೆ ಎಂಬ ಅಗರ್‌ವಾಲ್ ಅವರ ಮನವಿಯ ಮೇರೆಗೆ, ನ್ಯಾಯಪೀಠ ವಿಚಾರಣೆ ಕೈಗೆತ್ತಿಕೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.