ದೆಹಲಿಯತ್ತ ಹೊರಟ ಪ್ರತಿಭಟನನಿರತ ರೈತರ: ಸಿಂಘು ಗಡಿಯಲ್ಲಿ ಭದ್ರತೆ ಬಿಗಿ
ಪಿಟಿಐ ಚಿತ್ರ
ನವದೆಹಲಿ: ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿ ಕಾನೂನು ಸೇರಿದಂತೆ ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ರೈತರು ರಾಷ್ಟ್ರ ರಾಜಧಾನಿಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯೋಜಿಸಿರುವ ಕಾರಣ ಸಿಂಘು ಗಡಿಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ.
101 ರೈತರ ಗುಂಪು ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಗಡಿಯಿಂದ ಮಧ್ಯಾಹ್ನ ದೆಹಲಿಗೆ ತಮ್ಮ ಪಾದಯಾತ್ರೆಯನ್ನು ಆರಂಭಿಸುತ್ತಿದೆ.
ದೆಹಲಿ ಪೊಲೀಸರು ಎಚ್ಚರಿಕೆ ವಹಿಸಿ ಸಿಂಘು ಗಡಿಯಲ್ಲಿ ಭದ್ರತೆ ಕೈಗೊಂಡಿದ್ದಾರೆ. ಅಲ್ಲದೆ ಉತ್ತರ ಪ್ರದೇಶದ ಮತ್ತೊಂದು ರೈತರ ಗುಂಪು ನೊಯ್ಡಾದಲ್ಲಿ ಪ್ರತಿಭಟನೆ ನಡೆಸುತ್ತಿದೆ ಹೀಗಾಗಿ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಕನಿಷ್ಠ ಬೆಂಬಲ ಬೆಲೆ ಜತೆಗೆ, ರೈತರ ಕೃಷಿ ಸಾಲ ಮನ್ನಾ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ, ವಿದ್ಯುತ್ ದರ ಹೆಚ್ಚಳ ಮಾಡಬಾರದು, ರೈತರ ವಿರುದ್ಧದ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು, 2021ರ ಲಖೀಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎನ್ನುವ ಬೇಡಿಕೆಗಳನ್ನು ರೈತರು ಸರ್ಕಾರದ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.