ಮುಂಬೈ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತನ್ನ ನೆಲೆಯನ್ನು ಬಲಪಡಿಸಿಕೊಳ್ಳಲು ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ‘ಇಂಡಿಯಾ’ ಬಣ ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ವಿಸರ್ಜನೆಗೆ ಪಕ್ಷ ಎಂದಿಗೂ ಕರೆ ನೀಡಿಲ್ಲ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನಸಭಾ ಚುನಾವಣೆಗಾಗಿ ಎಂವಿಎ ಮತ್ತು ಲೋಕಸಭೆ ಚುನಾವಣೆಗಾಗಿ ‘ಇಂಡಿಯಾ’ ಮೈತ್ರಿಕೂಟವನ್ನು ರಚಿಸಲಾಗಿದೆ. ಸ್ಥಳೀಯ ಆಡಳಿತದ ಚುನಾವಣೆಗಳು ಪಕ್ಷದ ಕಾರ್ಯಕರ್ತರಿಗೆ ಶಕ್ತಿ ತುಂಬಲು ಮತ್ತು ತಳಮಟ್ಟದಲ್ಲಿ ಸಂಘಟನೆಗಳನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ’ ಎಂದು ತಿಳಿಸಿದ್ದಾರೆ.
‘ಮೈತ್ರಿಯಲ್ಲಿ ಆಯಾ ಪಕ್ಷಗಳ ಕಾರ್ಯಕರ್ತರಿಗೆ ಅವಕಾಶಗಳ ಕೊರತೆಯಿರುವುದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ. ನಾನಾಗಲಿ ಅಥವಾ ನಮ್ಮ ಪಕ್ಷವಾಗಲಿ ‘ಇಂಡಿಯಾ’ ಬಣ ಮತ್ತು ಎಂವಿಎ ಅನ್ನು ವಿಸರ್ಜಿಸಬೇಕೇಂದು ಎಂದಿಗೂ ಹೇಳಿಲ್ಲ’ ಎಂದು ರಾವುತ್ ಹೇಳಿದ್ದಾರೆ.
ಏಕಾಂಗಿ ಸ್ಪರ್ಧೆ ಕುರಿತು ಕಾಂಗ್ರೆಸ್ ನಾಯಕರು ಟೀಕಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾವುತ್, ‘ಕಾಂಗ್ರೆಸ್ ಪಕ್ಷದ ಸದಸ್ಯರು ಪ್ರತಿಕ್ರಿಯಿಸುವ ಮೊದಲು ಸಂಪೂರ್ಣ ವಿಷಯವನ್ನು ತಿಳಿದುಕೊಳ್ಳಬೇಕು. ಕಾಂಗ್ರೆಸ್ ನಾಯಕರಿಗೆ ಬೇರೆಯವರ ಮಾತು ಕೇಳುವ ಅಭ್ಯಾಸವಿರಬೇಕು’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.