ADVERTISEMENT

ಉತ್ತರ ಪ್ರದೇಶ | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

ಪಿಟಿಐ
Published 25 ಫೆಬ್ರುವರಿ 2024, 12:48 IST
Last Updated 25 ಫೆಬ್ರುವರಿ 2024, 12:48 IST
<div class="paragraphs"><p>ಪಟಾಕಿ ಕಾರ್ಖಾನೆಯಲ್ಲಿ  ಸ್ಫೋಟ</p></div>

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ

   

(ಚಿತ್ರ ಕೃಪೆ–ಎಎನ್‌ಐ)

ಕೌಶಾಂಬಿ: ಉತ್ತರ ಪ್ರದೇಶದ ಕೌಶಾಂಬಿ ಜಿಲ್ಲೆಯಲ್ಲಿ ಭಾನುವಾರ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಕೊಖ್ರಾಜ್ ಪೊಲೀಸ್ ಠಾಣೆ ವ್ಯಾಪ್ತಿಯ ಮಾಹೇವಾ ಗ್ರಾಮದಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿತ್ತು. ಆರಂಭದಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿತ್ತು.

ಸ್ಫೋಟದ ಬಗ್ಗೆ ಮಾಹಿತಿ ಪಡೆದ ಕೂಡಲೇ 10 ಅಗ್ನಿಶಾಮಕ ವಾಹನಗಳು ಹಾಗೂ ಆಂಬುಲೆನ್ಸ್‌ಗಳು ಘಟನಾ ಸ್ಥಳಕ್ಕೆ ಧಾವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಗರಾಜ್ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಭಾನು ಭಾಸ್ಕರ್ ಮಾತನಾಡಿ, 'ಪಟಾಕಿ ಕಾರ್ಖಾನೆ ಶಾಹಿದ್ (35) ಎಂಬಾತನಿಗೆ ಸೇರಿದೆ. ಘಟನೆಯಲ್ಲಿ 6 ಮಂದಿಯೊಂದಿಗೆ ಆತನೂ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶ ಪರಿಹಾರ ಆಯುಕ್ತರ ಕಚೇರಿ ಹಂಚಿಕೊಂಡ ಮಾಹಿತಿಯ ಪ್ರಕಾರ, ಮೃತರಲ್ಲಿ ನಾಲ್ವರನ್ನು ಶಿವನಾರಾಯಣ, ಶಿವಕಾಂತ್, ಅಶೋಕ್ ಕುಮಾರ್ ಮತ್ತು ಜೈಚಂದ್ರ ಎಂದು ಗುರುತಿಸಲಾಗಿದೆ. ಇನ್ನಿಬ್ಬರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ.

ಸ್ಫೋಟ ಸಂಭವಿಸಿದಾಗ ಸುಮಾರು 18 ಜನರು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ಇರಿಸಲಾಗಿದ್ದ ರಾಸಾಯನಿಕಗಳಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಸ್ಫೋಟ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಎಡಿಜಿಪಿ ಹೇಳಿದ್ದಾರೆ.

ಸ್ಫೋಟದ ತೀವ್ರತೆಗೆ ಜನರ ದೇಹಗಳು ಛಿದ್ರಗೊಂಡಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಕಾರ್ಖಾನೆ ಮಾಲೀಕ ಪಟಾಕಿ ತಯಾರಿಸಲು ಮತ್ತು ಮಾರಾಟ ಮಾಡಲು ಪರವಾನಗಿ ಹೊಂದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.